

ಬಳ್ಳಾರಿ : ಗ್ರಾಮಮಟ್ಟದಿಂದಲೇ ಸರ್ವತೋಮುಖ ಅಭಿವೃದ್ಧಿ ಆಗಬೇಕು. ಅದಕ್ಕೆ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಗುರುತಿಸುವಂತಹ ಅಭಿವೃದ್ಧಿ ಕಾರ್ಯಗಳು ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ನಡೆಯಬೇಕು ಎಂದು ಬಳ್ಳಾರಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಹೇಳಿದರು.
ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ 2ನೇ ಅವಧಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರುಗಳಿಗಾಗಿ ಹಮ್ಮಿಕೊಂಡಿದ್ದ ಸಮಾಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಆರ್.ಕೆ ಬಸವರಾಜ್ ಅವರು ಮಾತನಾಡಿ, ಗ್ರಾಮ ಪಂಚಾಯಿತಿಯ ಸ್ವರೂಪ ಹಾಗೂ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಬಹುದಾದಂತಹ ಕಾಮಗಾರಿಗಳ ಕುರಿತು ವಿಷಯ ಮಂಡನೆ ಮಾಡಿದರು.
ಪಂಚಾಯತ್‌ರಾಜ್ ಯೋಜನೆಯ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ರಿಸಲ್ದಾರ್ ಅವರು, ಗ್ರಾಮ ಪಂಚಾಯಿತಿಯ ಉಗಮ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ-1993ರ ಅಧ್ಯಾಯ-4, ಗ್ರಾಮ ಪಂಚಾಯಿತಿ 58 ರಿಂದ 110ರವರೆಗಿನ ಪ್ರಕರಣ ಕಾರ್ಯಗಳ ಬಗ್ಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ಬಳ್ಳಾರಿಯ 25 ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರುಗಳಿಗೆ ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು ಇತರ ಯೋಜನೆಗಳ ಕುರಿತು ಸಂವಾದ ಕಾರ್ಯಕ್ರಮ ಹಾಗೂ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಿದ ಕಾಮಗಾರಿಗಳನ್ನು ವಿಡಿಯೋ ಮೂಲಕ ಪ್ರದರ್ಶಿಸಲಾಯಿತು.
ಸಮಾಗಮ ಕಾರ್ಯಕ್ರಮ ಅಭಿವೃದ್ಧಿ ಕುರಿತು ಚಿಂತನೆ ಕಾರ್ಯಗಾರಕ್ಕೆ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಹಾಗೂ ಗಣ್ಯರು ಸೇರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ್‌ಗುಡಿ, ಮುಖ್ಯ ಲೆಕ್ಕಾಧಿಕಾರಿ ವಿನೋದ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ್, ಪಂಚಾಯತ್‌ರಾಜ್‌ನ ವ್ಯವಸ್ಥಾಪಕ ಬಚ್ಚಲಪ್ಪ ಸೇರಿದಂತೆ ತಾಲೂಕಿನ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.