

ಎನ್.ಆರ್.ಪುರ: ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಶೈಕ್ಷಣಿಕ ಕ್ರಾಂತಿ ಮಾಡಬೇಕು ಎಂದು ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಶೈಲಾ ಮಹೇಶ್ ಹೇಳಿದರು.
ತಾಲೂಕಿನ ಕಡಹಿನಬೈಲು ಗ್ರಾಪಂ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಶಾಸಕರಾದ ಟಿ.ಡಿ.ರಾಜೇಗೌಡ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಈ ಶಾಲೆಗೆ ಸ್ಮಾರ್ಟ್ ಕ್ಲಾಸ್ ನೀಡಿದ್ದಾರೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಶಿಕ್ಷಕರು ಇದನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸೇತುವೆಯಾಗಬೇಕು ಎಂದು ಕರೆ ನೀಡಿದರು.
ಗ್ರಾಪಂ ಉಪಾಧ್ಯಕ್ಷ ಸುನಿಲ್ ಕುಮಾರ್ ಮಾತನಾಡಿ, ಕ್ಷೇತ್ರದ ಶಾಸಕರು ಶಿಕ್ಷಣಕ್ಕೆ ಒತ್ತು ನೀಡಿ, ತಾಲೂಕಿನ ಸೀತೂರು, ಕಡಹಿನಬೈಲು ಹಾಗೂ ಮೂಡಬಾಗಿಲು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ನಡೆಸಲು ಡಿಜಿಟಲ್ ಟಿವಿಗಳನ್ನು ನೀಡಿದ್ದಾರೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಶಾಲೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ಎಂ.ಕಾಂತರಾಜ್ ಮಾತನಾಡಿ, ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್ ನಡೆಸಲು ಡಿಜಿಟಲ್ ಟಿವಿಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸರ್ಕಾರಿ ಶಾಲೆಗಳಿಗೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳೂ ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಜಗದೀಶ್, ಗ್ರಾಪಂ ಸದಸ್ಯರಾದ ವಾಣಿ ನರೇಂದ್ರ, ಎ.ಬಿ.ಮಂಜುನಾಥ್, ಮುಖ್ಯಶಿಕ್ಷಕಿ ಪುಟ್ಟಮ್ಮ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರಂಜಿತಾ ಹಾಗೂ ಸಮಿತಿ ಸದಸ್ಯರು ಇದ್ದರು.