

ಕುಶಾಲನಗರ: ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಮುನ್ನಡೆಯುವ ಬಹು ದೊಡ್ಡ ಜವಾಬ್ದಾರಿ ಭಾರತ ದೇಶದ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಹೇಳಿದರು.
ಕೊಡಗು ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ 134ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿ ದೆಸೆಯಿಂದಲೇ ಹಲವು ಅಪಮಾನ ಎದುರಿಸಿದ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ ಮತ್ತು ನ್ಯಾಯಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು ಆಧುನಿಕ ಭಾರತ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಶ್ರಮಿಸಿದರು.ದೀನದುರ್ಬಲರ ಉನ್ನತಿಗಾಗಿ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು. ಸಾಮಾಜಿಕ ಅಸಮಾನತೆಯ ಸಂಕೋಲೆಗಳನ್ನು ಮುರಿಯುವ ಸಾಧನವಾಗಿ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಭಾರತದಾದ್ಯಂತ ಅಂಬೇಡ್ಕರ್ ಜಯಂತಿ ಎಂದು ಆಚರಿಸಲಾಗುತ್ತದೆ. ಈ ದಿನದಂದು ಅವರ ಜೀವನ ಮತ್ತು ಕಾರ್ಯವನ್ನು ಗೌರವಿಸಲು ದೇಶಾದ್ಯಂತ ಸ್ಮರಣಾರ್ಥ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.
ಅಂಬೇಡ್ಕರ್ ಜಯಂತಿ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಶೇಷ ವಿಚಾರಧಾರೆಗಳನ್ನು ಕುರಿತು ಅರಿತು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇಡೀ ವಿಶ್ವವೇ ಕೊಂಡಾಡುವ ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದರು.
ಕಾರ್ಯಕ್ರಮದಲ್ಲಿ ಬೋಧಕ ವೃಂದ, ಬೋಧಕೇತರ ಸಿಬ್ಬಂದಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಇದ್ದರು.