ಗೋದಾಮು ನಿರ್ವಹಣೆ ಸುಧಾರಿಸಲಿ

13-gdg-4
Published on

ಗದಗ: ಜಿಲ್ಲೆಯ ಗೋದಾಮುಗಳ ನಿರ್ವಹಣೆಯಲ್ಲಿ ಇನ್ನಷ್ಟು ಸುಧಾರಣೆ ಕಾಣಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಇರುವ ಸಿಬ್ಬಂದಿ ಸ್ವೀಕರಿಸಿರುವ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ವಿಲೇವಾರಿ ಮಾಡಬೇಕು. ರೈತ ಸಂಪರ್ಕ ಕೇಂದ್ರಗಳಿಗೆ ಆಗಮಿಸುವ ರೈತರಿಗೆ ಸೂಕ್ತ ಸಲಹೆ ನೀಡಬೇಕು. ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿ ಹಾಗೂ ಮಕ್ಕಳಿಗೆ ಸರಬರಾಜಾಗುವ ಆಹಾರ ಸಾಮಗ್ರಿಗಳನ್ನು ಸರಿಯಾದ ಸಮಯಕ್ಕೆ ತಲುಪಿಸಬೇಕು ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ವಿ. ಶಿವಶಂಕರ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಸುರಕ್ಷತಾ ಅಧಿಕಾರಿಗಳು ಜಿಲ್ಲೆಯ ನ್ಯಾಯಬೆಲೆ ಅಂಗಡಿ, ಗೋದಾಮುಗಳು , ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳ ಆಹಾರಗಳನ್ನು ಆಗಾಗ್ಗೆ ಪರೀಕ್ಷಿಸುವ ಮೂಲಕ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

ರಾಜ್ಯದ 28 ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕ್ರಮಗಳ ಆಹಾರ ಭದ್ರತಾ ಯೋಜನೆಗಳ ಅನುಷ್ಠಾನದಲ್ಲಿರುವ ಸಮಸ್ಯೆ, ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ನ. 10ರಿಂದ ನ. 12ರ ವರೆಗೆ ವಿವಿಧ ತಾಲೂಕುಗಳ ವಿವಿಧ ಇಲಾಖೆಗಳಾದ ರೈತ ಸಂಪರ್ಕ ಕೇಂದ್ರ, ಅಂಗನವಾಡಿ ಕೇಂದ್ರ, ನ್ಯಾಯಬೆಲೆ ಅಂಗಡಿ, ಆಹಾರ ಸಂಗ್ರಹಣಾ ಗೋದಾಮು, ವಸತಿ ನಿಲಯ, ವೃದ್ಧಾಶ್ರಮ, ಅಂಗವಿಕಲರ ಆಶ್ರಮ, ಮಧ್ಯಾಹ್ನದ ಬಿಸಿಯೂಟದ ಗೋದಾಮು ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ದಾಖಲೆ ಪತ್ರಗಳನ್ನು ಪರಿಶೀಲಿಸುವುದರೊಂದಿಗೆ ಅಲ್ಲಿರುವ ವ್ಯವಸ್ಥೆ ವೀಕ್ಷಿಸಲಾಯಿತು. ಅವ್ಯವಸ್ಥೆ ಕಂಡುಬಂದ ಕಚೇರಿಗಳಿಗೆ ಸೂಕ್ತ ರೀತಿಯಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಪಿಂಚಣಿದಾರರಿಗೆ ಪಿಂಚಣಿ ನೀಡುವಲ್ಲಿ ಇರುವ ಲೋಪದೋಷಗಳನ್ನು ಶೀಘ್ರವೇ ಇತ್ಯರ್ಥಗೊಳಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಆಯೋಗದ ಸದಸ್ಯರಾದ ಬಿ.ಎ. ಅಹಮ್ಮದ್ ಅಲಿ ಹಾಗೂ ಮಂಜುಳಾ ಸಾತನೂರ ಮಾತನಾಡಿ, ಎಲ್ಲ ಅಂಗನವಾಡಿಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಗೃಹ, ವಿದ್ಯುತ್ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಡಾ. ಆನಂದ.ಕೆ ಮಾತನಾಡಿ, ಆಯೋಗವು ನೀಡಿರುವ ಸಲಹೆ ಸೂಚನೆಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಎಸಿ ರಾಯಪ್ಪ ಹುಣಸಗಿ, ಆಹಾರ ಇಲಾಖೆಯ ಉಪನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಸಹಾಯಕ ನಿರ್ದೇಶಕಿ ಗಿರಿಜಮ್ಮ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಿ.ಸಿ. ಕರಿಗೌಡ್ರ, ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಇನ್ನಿತರರು ಉಪಸ್ಥಿತರಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net