

ಬೆಳಗಾವಿ: ಮಹಿಳೆಯರಿಗಾಗಿ ಇರುವ ಕಾನೂನು ಹಾಗೂ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳ ಬಳಕೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಾರ್ಯಾಗಾರ ಆಯೋಜಿಸಿ ದೌರ್ಜನ್ಯದ ವಿರುದ್ಧ ಮಹಿಳೆಯರು ಧೈರ್ಯವಾಗಿ ಧ್ವನಿ ಎತ್ತುವಂತಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸ್ಪಂಧನ ಸಂಸ್ಥೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಮಹಿಳೆಯರ ಸಂರಕ್ಷಣೆ, ಹಕ್ಕುಗಳು ಹಾಗೂ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ, ಪೊಲೀಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರದ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಮಹಿಳೆಯರ ರುವ ಕಾನೂನು ಹಾಗೂ ಹಕ್ಕುಗಳ ಕುರಿತು ಅರಿವು ಮೂಡಿಸಬೇಕು ಎಂದರು.
112 ಸಹಾಯವಾಣಿ ಕುರಿತು ಪ್ರತಿಯೊಬ್ಬರಲ್ಲಿ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು. ಪೊಲೀಸರು ಜನಸ್ನೇಹಿಯಾಗಬೇಕು. ಮಕ್ಕಳಲ್ಲಿ ಪೋಲಿಸರ ಬಗ್ಗೆ ಇರುವ ಭಯ ನಿವಾರಣೆ ಮಾಡುವ ಕಾರ್ಯವಾಗಬೇಕು ಎಂದರು. ಸರ್ಕಾರಿ ಅಧಿಕಾರಿ, ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ಗ್ರಾಮೀಣ ಹಾಗೂ ಕೊಳಗೇರಿಗಳಲ್ಲಿ ವಾಸಿಸುವ ಜನರಿಗೆ ಸಿಗಬೇಕಾದ ಸೌಲಭ್ಯಗಳು ಲಭ್ಯವಾಗಬೇಕು. ಸರ್ಕಾರವು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಮಹಿಳೆಯರು ಸದುಪಯೋಗಪಡಿಸಿಕೊಳ್ಳಲು ಅಧಿಕಾರಿ, ಸಿಬ್ಬಂದಿ ಶ್ರಮಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಮುರಳಿಮೋಹನ ರೆಡ್ಡಿ ಮಾತನಾಡಿ, ಮಹಿಳೆಯರು ಎಲ್ಲ ರಂಗಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರಿಗೆ ಕಾನೂನು ಹಾಗೂ ಹಕ್ಕುಗಳ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಉತ್ತಮ ಸಮಾಲೋಚಕರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಮಾತನಾಡಿ, ಪೊಲೀಸ್ ಅಧಿಕಾರಿಗಳು ಮಹಿಳೆಯರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಇಆರ್‌ಎಸ್‌ಎಸ್ (112) ಕರೆ ಬಂದಲ್ಲಿ ಕೂಡಲೇ ಸ್ಪಂದಿಸುತ್ತಿದ್ದೇವೆ. ಇದು ಮಹಿಳೆಯರಲ್ಲಿ ಸುರಕ್ಷಿತ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರ ತೋಟಗೇರ, ಪ್ರತಿಮಾ ಜೋಶಿ ಹಾಗೂ ಪೊಲೀಸ್ ಅಧಿಕಾರಿ ಮಲ್ಲೇಶ ಜಾಲಗಾರ ಕಾನೂನು ಕುರಿತು ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರಾಮಮೂರ್ತಿ ಕೆ.ವಿ., ಸುಮಿತ್ರಾ, ಸ್ಪಂದನ ಸಂಸ್ಥೆಯ ಕಾರ್ಯದರ್ಶಿ ವಿ.ಸುಶೀಲ ಇತರರಿದ್ದರು.