

ವಿಜಯವಾಣಿ ಸುದ್ದಿಜಾಲ ಧಾರವಾಡ
ನಿತ್ಯ ಮಾಡುವ ಯೋಗ ಅನೇಕ ರೋಗಗಳ ಪರಿಹಾರಕ್ಕೆ ಉತ್ತಮ ಮಾರ್ಗ. ಯೋಗವನ್ನು ಜೀವನ ಪದ್ಧತಿಯಾಗಿ ಅಳವಡಿಸಿಕೊಂಡರೆ ಸದೃಢ ದೇಹ ಮತ್ತು ಆರೋಗ್ಯವಂತ ಮನಸ್ಸು ಹೊಂದಲು ಸಾಧ್ಯ. ಆಯುಷ್ ಇಲಾಖೆ ಯೋಗದ ಜನಪ್ರಿಯತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಅಂತರಾಷ್ಟ್ರೀಯ ಯೋಗ ದಿನವನ್ನು ಜೂ. 21ರಂದು ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥರ್ಪೂಣವಾಗಿ ಆಯೋಜಿಸಲಾಗುತ್ತದೆ. ಅಂದು ಬೆಳಗ್ಗೆ 6.45ಕ್ಕೆ ಉದ್ಘಾಟನೆ, ಬೆಳಗ್ಗೆ 7 ರಿಂದ 8ರವರೆಗೆ ಯೋಗ ಪ್ರದರ್ಶನ ಇರುತ್ತದೆ. ಇದರಲ್ಲಿ ಶಾಲಾ ಕಾಲೇಜು ಮಕ್ಕಳು, ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ವಿವಿಧ ಯೋಗ ಹಾಗೂ ಇತರ ಸಂಘ ಸಂಸ್ಥೆಗಳ ಸದಸ್ಯರು, ಜನರು ಭಾಗವಹಿಸಲಿದ್ದಾರೆ ಎಂದರು.
ಆಯುಷ್ ಇಲಾಖೆ ಮೂಲಕ ಕಾರ್ಯಕ್ರಮ ಸಂಘಟಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಕೇಂದ್ರ ಸಚಿವರು, ಸಭಾಪತಿ ಸೇರಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತದೆ. ಕಾರ್ಯಕ್ರಮದ ಯಶಸ್ವಿ ಸಂಘಟನೆ ವಿವಿಧ ಇಲಾಖೆಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದ್ದು, ಪ್ರತಿ ಇಲಾಖೆ ಅಧಿಕಾರಿಗಳು ಉತ್ತಮವಾಗಿ ನಿರ್ವಹಿಸಬೇಕು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಕೆ.ಪಿ., ವಿವಿಧ ಇಲಾಖೆ ಅಧಿಕಾರಿಗಳು, ಆಯುಷ್ ವೈದ್ಯರು, ಆಯುರ್ವೇದ ಮಹಾವಿದ್ಯಾಲಯ ಪ್ರತಿನಿಧಿಗಳು, ಯೋಗ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಇತರರು ಇದ್ದರು.
ಆಯುಷ ಇಲಾಖೆ ಜಿಲ್ಲಾ ಆಯುಷ ಅಧಿಕಾರಿ ಡಾ.ಗಣೇಶ ಕಬಾಡೆ ಸ್ವಾಗತಿಸಿದರು.