

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರ ಸೆ. 15ರಂದು ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸೋಣ. ಪ್ರತಿ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಢತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಜಿಲ್ಲೆಯ 51ಕಿ.ಮೀ ಮಾರ್ಗದಲ್ಲಿ ಮಾನವಸರಪಳಿ ನಿಮಿರ್ಸಲಾಗುತ್ತಿದೆ. ಪ್ರತಿ ಕಿಮೀಟರ್ಗೆ ನೇಮಿಸುವ ನೋಡಲ್ ಅಧಿಕಾರಿ ಯೋಜಿತ ರೀತಿ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರು ಶ್ರಮಿಸಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ನಾವು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಸಂಯೋಜಕತ್ವದಲ್ಲಿ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರತರಾಗಿದ್ದಾರೆ ಎಂದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಪಂ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕವಿವಿ ಕುಲಸಚಿವ ಎ.ಚನ್ನಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು, ಇತರರು ಇದ್ದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು.