

ರೋಣ: ಸ್ವಾತಂತ್ರ್ಯೋತ್ಸವವನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ತಹಸೀಲ್ದಾರ್ ನಾಗರಾಜ ಕೆ. ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಹಾಗೂ ನುಲಿಯ ಚಂದಯ್ಯ ಜಯಂತ್ಯುತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಜನಪ್ರತಿನಿಧಿಗಳ ಹೆಸರನ್ನು ಕಡ್ಡಾಯವಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಬೇಕು. ಆಚರಣೆ ವೇಳೆ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಪುರಸಭೆ ಮುಖ್ಯಾಧಿಕಾರಿ ಎಂ.ಆರ್. ಹೊಸಮನಿ ಅವರಿಗೆ ಸೂಚಿಸಿದರು. ಶಾಲಾ ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಬಿಇಒ ಅರ್ಜುನ ಕಾಂಬೋಗಿ ಅವರಿಗೆ ಸೂಚಿಸಿದರು. ಇನ್ನು ಆ. 9ರಂದು ನುಲಿಯ ಚಂದಯ್ಯ ಅವರ ಜಯಂತಿಯನ್ನು ಎಲ್ಲ ಇಲಾಖೆಯ ಕಚೇರಿಗಳಲ್ಲಿ ಆಚರಿಸಬೇಕು ಎಂದರು.
ಅಕ್ಷರ ದಾಸೋಹ ಕಾರ್ಯಕ್ರಮ ಅಧಿಕಾರಿ ಆರ್.ಎನ್. ನಾಯ್ಕರ ಸ್ವಾಗತಿಸಿದರು. ವಿವಿಧ ಸಮಾಜದ ಮುಖಂಡರು, ಅಧಿಕಾರಿಗಳು ಹಾಜರಿದ್ದರು.