

ಹುಣಸೂರು: ಬೆಳಗಾವಿ ಅಧಿವೇಶನದಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ರಾಜ್ಯ ಮಾದಿಗ ಮತ್ತು ಮಾದಿಗ ಸಂಬಂಧಿತ ಉಪಜಾತಿಗಳ ಒಳಮೀಸಲಾತಿ ಜಾರಿ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯುವತ್ತ ಕ್ರಮವಹಿಸಬೇಕೆಂದು ರಾಜ್ಯ ಆದಿಜಾಂಬವ ಸಂಘದ ತಾಲೂಕು ಅಧ್ಯಕ್ಷ ಬಿ.ಶಿವಣ್ಣ ಆಗ್ರಹಿಸಿದರು.
ಶಾಸಕ ಜಿ.ಡಿ.ಹರೀಶ್‌ಗೌಡರಿಗೆ ಈ ಕುರಿತು ಸಂಘದ ಪರವಾಗಿ ಇತ್ತೀಚೆಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, 2024ರ ಆ.1ರಂದು ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ತೀರ್ಪು ಬಂದು 4 ತಿಂಗಳು ಕಳೆದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಇನ್ನೇನನ್ನೂ ಮಾಡಿಲ್ಲ. 2 ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆಂದು ಸರ್ಕಾರ ಹೇಳಿತ್ತು. ಆದರೆ 45 ದಿನಗಳು ಕಳೆದರೂ ಆಯೋಗ ಕೆಲಸ ಆರಂಭಿಸಿಲ್ಲ. ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ಕೊಡದೆ ಕಾಲಹರಣ ಮಾಡಲಾಗುತ್ತಿದೆ. ಆಯೋಗ ರಚಿಸಬೇಕೆನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ. ಸರ್ಕಾರದ ಮುಂದೆ ನ್ಯಾಯಮೂರ್ತಿ ಸದಾಶಿವ ಆಯೋಗ ಹಾಗೂ ಮಾಧುಸ್ವಾಮಿ ಸಮಿತಿ ಇದೆ. ಮಾಧುಸ್ವಾಮಿ ಅವರ ಸಮಿತಿ ಎ.ಕೆ. (ಆದಿಕರ್ನಾಟಕ) ಎ.ಡಿ. (ಆದಿದ್ರಾವಿಡ) ಸಮಸ್ಯೆಗೆ ಪರಿಹಾರ ಒದಗಿಸಿದೆ ಎಂದರು.
2011ರ ಜನಗಣತಿಯ ಅಂಕಿ ಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡದೆ ಈಗ ಮತ್ತೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರ್ಕಾರದ ಈ ಮಂದಗತಿ, ನಿರ್ಲಕ್ಷ್ಯ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಒಳಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಹುಸಿಯಾಗಿದೆ. ನೇಮಕಾತಿಯ ಆದೇಶಗಳು ವಿವಿಧ ಇಲಾಖೆಯಿಂದ ಜಾರಿಯಾಗುತ್ತಿವೆ. ಇದು ಖಂಡನಾರ್ಹ. ಹರಿಯಾಣದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನ ತೀರ್ಪು ಬಂದ ಒಂದೇ ವಾರದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಹಸಿಸುಳ್ಳು ಭರವಸೆ ನೀಡಿದ ಕಾಂಗ್ರೆಸ್ ನಾಯಕರು ಮಾದಿಗ ಸಮಾಜದ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆ. ಆದ್ದರಿಂದ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಸರ್ಕಾರಕ್ಕೆ ಚಾಟಿ ಬೀಸುವ ಮೂಲಕ ನಮ್ಮ ಬೆಂಬಲಕ್ಕೆ ಬರಬೇಕೆಂದು ಶಾಸಕರಲ್ಲಿ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಕುಮಾರ್, ಮುಖಂಡರಾದ ರಾಯನಹಳ್ಳಿಸ್ವಾಮಿ, ಸತೀಶ್‌ಕುಮಾರ್, ನಿಂಗರಾಜ ಮಲ್ಲಾಡಿ, ನಗರಸಭಾಧ್ಯಕ್ಷ ಎಸ್.ಶರವಣ, ಸದಸ್ಯ ಕೃಷ್ಣರಾಜ ಗುಪ್ತ ಇತರರಿದ್ದರು.