

ವಿಜಯಪುರ: ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಸೆ.30ರಂದು ಹಮ್ಮಿಕೊಂಡಿರುವ ‘ಕರ್ನಾಟಕ ಸಂಭ್ರಮ-50’ನ್ನು ಯಶಸ್ವಿಗೊಳಿಸೋಣ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುತ್ತಿರುವ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಸೋಮವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗುಡ್ಡಾಪುರ ಶ್ರೀ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಸೆ.30ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವಿಜೃಂಭಣೆಯಿಂದ ಆಯೋಜಿಸಲು ಈಗಾಗಲೇ ಸಭೆ ನಡೆಸಿ ಎಲ್ಲ ರೀತಿಯ ಸಹಾಯ ಸಹಕಾರ ಕೋರಲಾಗಿದೆ. ಸಾಂಗ್ಲಿಯ ಜಿಲ್ಲಾಡಳಿದ ಸಹಕಾರವೂ ಕೋರಲಾಗಿದೆ ಎಂದರು.
ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ಸಂಭ್ರಮದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ವಹಣೆ ಮತ್ತು ನಿರ್ಮಾಣ, ಸಾಂಸ್ಕೃತಿಕ ಕಾರ್ಯಕ್ರಮ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವುದರಿಂದ, ಸುಸಜ್ಜಿತ ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮವಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಅವರು ತಿಳಿಸಿದರು.
ಶಾಸಕ ವಿಠಲ ಕಟಕದೊಂಡ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಕನ್ನಡಪರ ಸಂಘ-ಸಂಸ್ಥೆಗಳು, ಸಾರ್ವಜನಿಕರು ಸಹಕರಿಸಬೇಕೆಂದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಸದಸ್ಯ ಡಾ.ಎಂ.ಎಸ್. ಮಧಬಾವಿ, ಜಿಪಂ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಬದ್ರುದ್ಧಿನ್ ಸೌದಾಗರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಂತೋಷ ಬೋವಿ ಮತ್ತಿತರರಿದ್ದರು.