

ಹೂವಿನಹಡಗಲಿ: ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆಗಳಲ್ಲಿನ ಹೂಳು ತೆಗೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಸೋಮವಾರ ತಹಸೀಲ್ದಾರ್ ಸಂತೋಷ್‌ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ತಾಲೂಕು ಅಧ್ಯಕ್ಷ ಹೊಸಮನಿ ಸಿದ್ದಪ್ಪ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಆರಂಭಿಸುತ್ತಾರೆ. ಆದರೆ ಸಕಾಲದಲ್ಲಿ ಮಳೆಯಾಗದಿದ್ದರೆ ಅವರು ಬಿತ್ತ್ತನೆ ಮಾಡಿದ ಬೆಳೆ ಸರಿಯಾಗಿ ಬರುವುದಿಲ್ಲ.
ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆಗಳು ನಿರ್ವಹಣೆ ಇಲ್ಲದೆ ಹೂಳು ತುಂಬಿಕೊಂಡಿವೆ. ಇದರಿಂದ ಯೋಜನೆಯ ಕೊನೇ ಭಾಗದ ಜಮೀನುಗಳಿಗೆ ನೀರೊದಗುತ್ತಿಲ್ಲ. ಉದ್ಯೋಗ ಖಾತರಿ ಯೋಜನೆ ಅಡಿ ಕಾಲುವೆಗಳನ್ನು ಸ್ವಚ್ಛಗೊಳಿಸಿದರೆ ರೈತರ ಜಮೀನುಗಳಿಗೆ ನೀರು ಒದಗುತ್ತದೆ ಎಂದರು.