

ಮೈಸೂರು: ಮುಂದಿನ ದಿನಗಳಲ್ಲಿಯೂ ಪಕ್ಷಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿಯೋಣ. ದೇಶ ಕಟ್ಟಲು ಬದ್ಧರಾಗೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಗ್ರಾಮಾಂತರ ಪದಾಧಿಕಾರಿಗಳ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ ತಾವೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿದ್ದೀರಿ. ಕಾರ್ಯಕರ್ತರು, ಮುಖಂಡರು ಚುನಾವಣೆಗೆ ಹಗಲಿರುಳು ಸಮಯ ಕೊಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಇದಕ್ಕೆ ತಮ್ಮೆಲ್ಲರಿಗೂ ವಂದಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ನಾವೆಲ್ಲರೂ ನಿರೀಕ್ಷೆಗೂ ಮೀರಿ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವೆ. ಹೀಗಾಗಿ ಕನಿಷ್ಠ 25 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಕ್ಷರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಗೊಳಿಸುವ ಕೆಲಸ ಮಾಡೋಣ. ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಲಿದ್ದಾರೆ. ಇಡೀ ದೇಶ ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ, ಕಿರಣ್ ಜಯರಾಮೇಗೌಡ, ಪಕ್ಷದ ಜಿಲ್ಲಾ, ತಾಲೂಕು ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಮಹಿಳಾ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಮೋರ್ಚಾದ ಪ್ರಮುಖರು ಇದ್ದರು.