

ಹುಬ್ಬಳ್ಳಿ: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಅಲ್ಲದೇ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು.
ನಗರದ ಜನತಾ ಬಜಾರ್, ದುರ್ಗದಬೈಲ್, ಸಿಬಿಟಿ ಇತರೆಡೆ ಅಂಗಡಿ-ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಬಸ್, ಆಟೋರಿಕ್ಷಾ ಸೇರಿದಂತೆ ವಿವಿಧ ವಾಹನಗಳ ಸಂಚಾರ ಯಥಾಸ್ಥಿತಿಯಲ್ಲಿತ್ತು. ಹೋಟೆಲ್‌ಗಳು, ಮಾಲ್‌ಗಳು ಇತರ ವಾಣಿಜ್ಯ ಸಂಕೀರ್ಣಗಳಲ್ಲಿ ಗ್ರಾಹಕರು ತುಂಬಿ ತುಳುಕುತ್ತಿದ್ದರು.
ಕೆಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಬೆಳಗ್ಗೆ 11.30ರ ಸುಮಾರಿಗೆ ಚನ್ನಮ್ಮ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದರು. ಎಂಇಎಸ್ ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯ ಗಡಿ ಭಾಗದಲ್ಲಿ ಎಂಇಎಸ್ ಮುಖಂಡರ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಹೇಳುವವರು ಕೇಳುವವರು ಯಾರು ಇಲ್ಲದಾಗಿದೆ. ಬೆಳಗಾವಿ ಜಿಲ್ಲಾಡಳಿತ ಕಣ್ಣೊರೆಸುವ ತಂತ್ರ ರೂಪಿಸುತ್ತಿದೆ. ಕೂಡಲೇ ಎಂಇಎಸ್ ಪುಂಡರನ್ನು ಗಡಿಪಾರು ಮಾಡಬೇಕು. ಇಂದು ಸಾಂಕೇತಿಕವಾಗಿ ಬಂದ್‌ಗೆ ಬೆಂಬಲಿಸಿದ್ದೇವೆ. ಎಂಇಎಸ್ ಪುಂಡರು ತಮ್ಮ ಪುಂಡಾಟಿಕೆ ಇಲ್ಲಿಗೆ ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನಾ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.