

ಚಿಕ್ಕಮಗಳೂರು: ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಲಯನ್ಸ್ ಕ್ಲಬ್‌ನಿಂದ ಉಚಿತ ಕನ್ನಡಕ ವಿತರಿಸಲಾಗುವುದು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಪುಷ್ಪರಾಜ್ ತಿಳಿಸಿದರು.
ಕಳಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್, ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸೇವೆಯನ್ನು ಧ್ಯೇಯವಾಗಿಸಿಕೊಂಡು ಕೆಲಸ ಮಾಡುತ್ತಿರುವ ಲಯನ್ಸ್ ಸಂಸ್ಥೆ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಆದ್ಯತೆ ನೀಡುತ್ತಿದೆ. ಆರೋಗ್ಯ ಇಲಾಖೆಯ ಎಲ್ಲ ಸೇವಾ ಕಾರ್ಯಕ್ರಮಗಳಿಗೆ ತನ್ನ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.
ನೇತ್ರ ತಜ್ಞ ಡಾ. ಸಖರಾಂ ಶೆಟ್ಟಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳ ಜನರಲ್ಲಿ ಪೌಷ್ಠಿಕ ಆಹಾರ ಸೇವನೆ ಕೊರತೆಯಿಂದ ಕಣ್ಣಿನಲ್ಲಿ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದನ್ನು ಪ್ರಾರಂಭಿಕ ಹಂತದಲ್ಲೇ ಸೂಕ್ತ ಶಸ್ತ್ರ ಚಿಕಿತ್ಸೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಬಡಜನರಿಗೆ ಆರೊಗ್ಯ ಸೌಲಭ್ಯ ತಲುಪಿಸುವ ದೃಷ್ಠಿಯಿಂದ ಕಳಸಾಪುರ ಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಕಣ್ಣಿನ ಪೊರೆ ಸೇರಿದಂತೆ ಇನ್ನಿತರೆ ಸಮಸ್ಯೆ ಇರುವವರಿಗೆ ಈ ಆರೋಗ್ಯ ಶಿಬಿರದಲ್ಲಿ ತಪಾಸಣೆ ನಡೆಸಲಾಗುವುದು ಎಂದು ಹೇಳಿದರು. ಲಯನ್ಸ್ ಕ್ಲಬ್ ಖಜಾಂಚಿ ಗಿರೀಶ್, ನೇತ್ರ ತಪಾಸಣಾ ಶಿಬಿರದ ಸಂಯೋಜನಾಧಿಕಾರಿ ಲಯನ್ಸ್ ಎಸ್.ಆರ್. ವೈದ್ಯ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ ಉಪಸ್ಥಿತರಿದ್ದರು.