ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಉದ್ದೇಶ

sakshrata dina
ದೇವನಹಳ್ಳಿಯ ಜಿಲ್ಲಾಡಳಿತಭವನ ಆವರಣದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಆಚರಿಸಲಾಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಶಿಕುಮಾ
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಾಕ್ಷರತೆಯ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಅಂತರಾಷ್ಟ್ರೀಯ ಸಾಕ್ಷರತಾ ದಿನ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಯೋಜನ ನಿರ್ದೇಶಕ ವಿಠ್ಠಲ್ ಕಾವ್ಳೆ ಹೇಳಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತಭವನದ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 58 ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದರು. ಪ್ರತಿ ವ್ಯಕ್ತಿಯ ಜೀವನದಲ್ಲೂ ಸಾಕ್ಷರತೆ ಎಂಬುದು ಬಹುಮುಖ್ಯ ಅಂಶವಾಗಿದೆ, ಸಾಕ್ಷರತೆ ವ್ಯಕ್ತಿಯನ್ನು ಸಮಾಜದಲ್ಲಿ ಘನತೆಯಿಂದ ಬದಕಲು ಸಹಾಯ ಮಾಡುವುದರ ಜತೆಗೆ ಸ್ವಾವಲಂಭಿಯಾಗಿ ಬದುಕಲು ಸಹಕರಿಸುತ್ತದೆ ಎಂದರು. ಸಾಕ್ಷರತೆಯು ಉದ್ಯೋಗ ಮತ್ತು ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಇದು ಜನರನ್ನು ಬಡತನ ಮತ್ತು ನಿರುದ್ಯೋಗದಿಂದ ಹೊರಬರಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಸಾಕ್ಷರತೆ ಬಗ್ಗೆ ಜಾಗೃತಿ: ಜನರಲ್ಲಿ ಸಾಕ್ಷರತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಆಚರಣೆ ಮಾಡಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು. ಸಮಾಜದಲ್ಲಿನ ಪ್ರತಿ ವ್ಯಕ್ತಿಯ ಸಾಮಾಜಿಕ ಮತ್ತು ವೈಯಕ್ತಿಕ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಸಾಕ್ಷರತಾ ದಿನದ ಆಚರಣೆಯ ಪ್ರಮುಖ ಉದ್ದೇಶವಾಗಿದೆ. ಸಾಕ್ಷರತೆಯನ್ನು ಸಾಮಾಜಿಕ ಮತ್ತು ವೈಯಕ್ತಿಕ ಅಭಿವೃದ್ಧಿಗೆ ಅತ್ಯಂತ ಪ್ರಮುಖವಾದ ಅಂಶ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು. ಸಮಾಜದಲ್ಲಿ ಬಡತನ ಪ್ರಮಾಣ ತಗ್ಗಿಸುವುದು, ಜನಸಂಖ್ಯೆ ನಿಯಂತ್ರಿಸುವುದು, ಲಿಂಗ ತಾರತಮ್ಯ ಮತ್ತು ಅಸಮಾನತೆಯಂತಹ ಸಮಸ್ಯೆಗಳ ನಿರ್ಮೂಲನೆ ಮಾಡುವಲ್ಲಿ ಸಾಕ್ಷರತೆ ಪ್ರಮುಖ ಪಾತ್ರವಹಿಸಲಿದೆ ಎಂದರು. ಅನೇಕ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಮತ್ತು ಹೆಚ್ಚಿನವರು ನಿಯಮಿತವಾಗಿ ಶಾಲೆಗಳಿಗೆ ಹಾಜರಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಎಲ್ಲರಲ್ಲೂ ಸಾಕ್ಷರತೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಇದು ಸಾಕ್ಷರತೆಯನ್ನು ಉತ್ತೇಜಿಸಲು ಮತ್ತು ಸುಸ್ಥಿರ ಸಮಾಜ ನಿರ್ಮಿಸಲು ಕೊಡುಗೆ ನೀಡುವ ಗುರಿ ಹೊಂದಿದೆ ಎಂದರು.

ಸಾಕ್ಷರತಾ ಧ್ವಜಾರೋಹಣ:ಜಿಲ್ಲಾ ಪಂಚಾಯತಿ ಯೋಜನ ನಿರ್ದೇಶಕರಾದ ವಿಠ್ಠಲ್ ಕಾವ್ಳೆ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಡಯಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವಜನ ಕ್ರೀಡೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಕೃಷಿ ಇಲಾಖೆ, ನಗರಾಭಿವೃದ್ಧಿ ಕೋಶ ಹಾಗೂ ಇತರೆ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಸಮನ್ವಯತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಹಾಗೂ ಗ್ರಾಮ ಪಂಚಾಯತಿ ಹಂತಗಳಲ್ಲಿ ಸಾಮಾಜಿಕ ಚೇತನ ಕೇಂದ್ರಗಳನ್ನು ಸ್ಥಾಪಿಸಿ, ಪ್ರತಿ ಶಾಲೆಯಲ್ಲಿ ಸಮುದಾಯ ಸಂಚಲನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net