

ಬೆಳಗಾವಿ : ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬೀಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.
ನಾವು ಕೇವಲ ಬಾಯಿ ಮಾತಿಗೆ ಹೇಳಬಾರದು. ಇದನ್ನು ಜಾರಿಗೆ ತರಬೇಕು. ಈ ಮೊದಲು ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವೆ ಎಂದು ಸಚಿವರು ಪ್ರತಿಕ್ರಿಯಿಸಿದರು.
ಡಿಸೆಂಬರ್ 9 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಬರಬಹುದು. ಈ ಕುರಿತು ಎಲ್ಲ ಶಾಸಕರ ಜತೆಗೆ ಒಂದು ಸುತ್ತು ಮಾತನಾಡಲಾಗಿದೆ, ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಸಚಿವರು ಹೇಳಿದರು.
* *ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೆ*
ಮಹಾರಾಷ್ಟ್ರದಲ್ಲಿ ನಾನು ಕೂಡ ಐದು ದಿನಗಳ ಕಾಲ ಪ್ರಚಾರ ಮಾಡಿದ್ದೇನೆ. ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಅಘಾಡಿ (ಎಂವಿಎ) ಸರ್ಕಾರ ರಚಿಸಲಿದೆ ಎಂದು ತಿಳಿಸಿದರು. ರಾಜ್ಯದ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.