ಲಾಕ್‌ಡೌನ್ ಪರಿಶೀಲಿಸಿದ ಅಂಗಡಿ

28manju3a-Web
ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಾಲಿಸುತ್ತಿರುವ ಹಾಗೂ ಅಧಿಕಾರಿಗಳು ಕೈಗೊಂಡ ಕ್ರಮಗಳನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಲ್ಲಿ ಪರಿಶೀಲಿಸಿದರು. ಶಾಸಕ ಅನಿಲ ಬೆನಕೆ ಹಾಗೂ ಪೊಲೀಸ್ ಅಧಿಕಾರಿಗಳಿದ್ದರು.
Published on

ಬೆಳಗಾವಿ: ಕರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ಡೌನ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶನಿವಾರ ಪರಿಶೀಲನೆ ನಡೆಸಿದರು.

ನಗರದ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಖಡೇಬಜಾರ, ಕಿರ್ಲೋಸ್ಕರ್ ರಸ್ತೆ, ಕಾಲೇಜು ರಸ್ತೆ ಸೇರಿ ವಿವಿಧ ಮಾರ್ಗಗಳಲ್ಲಿ ಲಾಕ್‌ಡೌನ್‌ನಿಂದ ಉಂಟಾಗಿರುವ ಸಾಧಕ-ಬಾಧಕ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ರಸ್ತೆಯ ಮೇಲೆ ಓಡಾಡುತ್ತಿದ್ದ ಸಾರ್ವಜನಿಕರಿಗೆ, ಅಂಗಡಿಗಳ ಮುಂಭಾಗದಲ್ಲಿ ನಿಂತಿದ್ದ ಗ್ರಾಹಕರಿಗೆ ಏ. 14ರ ವರೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸಚಿವರು ಮನವಿ ಮಾಡಿದರು.

ಕರೊನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರು, ವೈದ್ಯರು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಕರ್ತವ್ಯದ ಜತೆಗೆ ಆರೋಗ್ಯದ ಕಡೆ ವಿಶೇಷ ಗಮನ ನೀಡಬೇಕು. ಜನರ ಸೇವೆ ಮಾಡುವವರು ಆರೋಗ್ಯವಾಗಿದ್ದರೆ ಮಾತ್ರ ಸಮಾಜ ಆರೋಗ್ಯವಾಗಿರುತ್ತದೆ. ಹಾಗಾಗಿ ಅಧಿಕಾರಿಗಳು ತಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸಚಿವರು ವಿನಂತಿಸಿದರು.

ವಿಶ್ವದ ಎಲ್ಲ ರಾಷ್ಟ್ರಗಳಲ್ಲಿ ಕರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಸಂಬಂಧ ಭಾರತದಲ್ಲಿ ಕಟ್ಟೆಚ್ಚರ ವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ಜನರ ಆರೋಗ್ಯ ಸಂರಕ್ಷಣೆ ಸಲುವಾಗಿ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು. ಸಣ್ಣ ಪುಟ್ಟ ವಿಷಯಗಳನ್ನು ಮುಂದಿಟ್ಟುಕೊಂಡು ಹೊರಗಡೆ ಬಂದು ಓಡಾಡುವ ಕೆಲಸ ಮಾಡಬಾರದು. ವೈರಸ್ ಸಂಪೂರ್ಣ ನಿಯಂತ್ರಣಕ್ಕಾಗಿ ವೈದ್ಯರು ಶ್ರಮ ವಹಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net