

ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಡಿ. 14ರಂದು ಈ ವರ್ಷದ ಕೊನೆಯ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ವಿಲೇವಾರಿ ಮಾಡಿಕೊಳ್ಳಬಹುದು ಎಂದು ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 34 ಕೇಸುಗಳು ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದು, ರಾಜೀಯಾಗಬಲ್ಲ 2121 ಕೇಸುಗಳನ್ನು ಗುರುತಿಸಲಾಗಿದೆ. ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚಿಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್, ಸಾಲದ ವಸೂಲಾತಿ ಪ್ರಕರಣಗಳು, ಮೋಟಾರ್ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣ, ಭೂ ಸ್ವಾಧಿನ ಪರಿಹಾರ ಪ್ರಕರಣ ಸಹಿತ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಎಸ್.ಆರ್. ಮಾತನಾಡಿ, ಮಾರ್ಚ್ನಲ್ಲಿ ನಡೆದ ಲೋಕಅದಾಲತ್ನಲ್ಲಿ 2381 ಬಾಕಿ ಪ್ರಕರಣಗಳು ಹಾಗೂ 40241 ವ್ಯಾಜ್ಯ ಪೂರ್ವ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಜುಲೈನಲ್ಲಿ ನಡೆದಿದ್ದ ಅದಾಲತ್ನಲ್ಲಿ 4012 ಬಾಕಿ ಪ್ರಕರಣ ಹಾಗೂ 84913 ವ್ಯಾಜ್ಯ ಪೂರ್ವ ಪ್ರಕರಣ, ಸೆಪ್ಟೆಂಬರ್ನಲ್ಲಿ ನಡೆದಿದ್ದ ಅದಾಲತ್ನಲ್ಲಿ 3015 ಬಾಕಿ ಪ್ರಕರಣ, 41078 ವ್ಯಾಜ್ಯ ಪೂರ್ವ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ತಿಳಿಸಿದರು.