ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್​

5udp lok adhalath
Published on

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಮಾ.8 ರಂದು ಬೆಳಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ರಾಷ್ಟ್ರೀಯ ಲೋಕ ಅದಾಲತ್​ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್​ ಎಸ್​.ಗಂಗಣ್ಣನವರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವರ್ಷದ ಮೊದಲ ಲೋಕ ಅದಲಾತ್​ನಲ್ಲಿ ರಾಜಿಯಾಗಬಲ್ಲ 3,442 ಸಿವಿಲ್​ ಪ್ರಕರಣಗಳನ್ನು ಗುರುತಿಸಲಾಗಿದೆ. 1,172 ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಇದೆ. 3,300 ವ್ಯಾಜ್ಯಪೂರ್ವ ಪ್ರಕರಣಗಳ ಬಗ್ಗೆಯೂ ಸಂಧಾನ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀಮಾರ್ನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.

2024 ರಲ್ಲಿ ನಡೆದ 4 ಲೋಕ ಅದಾಲತ್​ನಲ್ಲಿ 12,966 ವಾಜ್ಯಗಳು ಹಾಗು 1,92,976 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿದೆ. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 15,674 ಸಿವಿಲ್​ ವ್ಯಾಜ್ಯಗಳು ಹಾಗೂ 18,734 ಕ್ರಿಮಿನಲ್​ ವ್ಯಾಜ್ಯಗಳು ವಿಚಾರಣೆ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್​.ಯೋಗೆಶ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net