

ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಉಡುಪಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 35,000 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಅದರಲ್ಲಿ ಈ ಬಾರಿಯ ಲೋಕ ಅದಾಲತ್ನಲ್ಲಿ 4,900 ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳ ಇತ್ಯರ್ಥಗೊಳಿಸಲು ಗುರುತಿಸಲಾಗಿದೆ. ಇದರಲ್ಲಿ ಬಹುತೇಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಕಳೆದ ಬಾರಿ ಮಾ.8ರಂದು ನಡೆದ ಅದಾಲತ್ನಲ್ಲಿ ವ್ಯಾಜ್ಯ ಪೂರ್ವ 32,860 ಪ್ರಕರಣಗಳಲ್ಲಿ 289634 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಅದೇ ರೀತಿ 3400 ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳ ಪೈಕಿ 2802 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದರು.
ರಾಜೀಗೆ ವಿಶೇಷ ಅವಕಾಶ
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಲೋಕ ಅದಾಲತ್ ಉತ್ತಮ ಅವಕಾಶವಾಗಿದೆ. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್, ಸಾಲದ ವಸೂಲಾತಿ ಪ್ರಕರಣಗಳು, ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ, ಕುಟುಂಬ ನ್ಯಾಯಾಲಯಗಳ ಪ್ರಕರಣಗಳು, ಭೂ ಸ್ವಾಧಿನ ಪರಿಹಾರ ಪ್ರಕರಣಗಳು, ಭೂ ಸ್ವಾಧಿನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್. ಉಪಸ್ಥಿತರಿದ್ದರು.