

ಮದ್ದೂರು: ಪಟ್ಟಣದ ಪುರಸಭಾ ವ್ಯಾಪ್ತಿಯ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ಪಟ್ಟಣದಲ್ಲಿ ಶನಿವಾರ ನಗರೋತ್ಥಾನ ಹಂತ-4ರ ಅಡಿ ಪುರಸಭೆ ವ್ಯಾಪ್ತಿಯ ರಸ್ತೆ ಮತ್ತು ಚರಂಡಿ 47.26 ಲಕ್ಷ ರೂ.ಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ರಸ್ತೆಗಳು, ಚರಂಡಿ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಆದ್ಯತೆ ಮೇರೆಗೆ ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಹಲವಾರು ವರ್ಷಗಳಿಂದ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳಿದ್ದವು, ನಾನು ಜನರ ಸಂಪರ್ಕ ಮಾಡಿದ ಸಂದರ್ಭದಲ್ಲಿ ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ನನ್ನ ಗಮನಕ್ಕೆ ತಂದಿದ್ದರು. ಅವುಗಳನ್ನು ಪಟ್ಟಿ ಮಾಡಿಕೊಂಡು ಪ್ರತಿಯೊಂದು ವಾರ್ಡ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹಲವಾರು ವರ್ಷಗಳ ಹಿಂದೆ ಪಟ್ಟಣದ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿಯ ಅಭಿಯಂತರರು ಹಾಗೂ ಅಧಿಕಾರಿಗಳು ಬೇರೆ ಕಡೆಗೆ ವರ್ಗಾವಣೆಯಾಗಿರುವುದರಿಂದ ಸ್ವಲ್ಪ ಸಮಸ್ಯೆಯಾಗಿತ್ತು. ಈಗ ಎಲ್ಲ ಸಮಸ್ಯೆಗಳನ್ನು ಸರಿಪಡಿಸಲು ಕ್ರಮ ಕೈಗೊಂಡಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ಸಮಸ್ಯೆ ಸರಿಪಡಿಸಲು ಕಾಮಗಾರಿ ಮಾಡಲು ಟೆಂಡರ್ ಕರೆಯಲಾಗಿದ್ದು, ಶೀಘ್ರವಾಗಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದರಾಜು, ಸದಸ್ಯರಾದ ಎಂ.ಬಿ.ಸಚಿನ್, ಮೋಹನ್, ಮುಖ್ಯಾಧಿಕಾರಿ ಮೀನಾಕ್ಷಿ, ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಶಾಂತಮ್ಮ, ಆರ್.ಸಿ.ಮಹೇಶ್ ಇದ್ದರು.