

ಮಡಿಕೇರಿ: ಸಾಧನೆಗಳನ್ನು ಸಕಾರಗೊಳಿಸಲು ಸತತ ಪ್ರಯತ್ನ ಅಗತ್ಯ ಎಂದು ಆಜಾದಿ ಕಾ ಅಮೃತ್ ಮಹೋತ್ಸವ ಜಿಲ್ಲಾ ನೋಡಲ್ ಅಧಿಕಾರಿ ಡಾ.ಮೇಜರ್ ರಾಘವ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ವಾತಂತ್ರ್ಯ ಓಟದಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು. ಮನಸ್ಸಿದ್ದರೆ ಮಾರ್ಗ ಎನ್ನುವಂತೆ ವಿದ್ಯಾರ್ಥಿ ಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಬಹಳ ಸುಲಭ. ಅದಕ್ಕೆ ಸತತ ಪ್ರಯತ್ನ ಮತ್ತು ಪರಿಶ್ರಮ ಬಹಳ ಮುಖ್ಯ. ವಿದ್ಯಾರ್ಥಿಗಳು ಪ್ರತಿಯೊಬ್ಬ ಸಾಧಕನ ಇತಿಹಾಸ ಓದಿ ಅರ್ಥೈಸಿಕೊಂಡು ಮುನ್ನಡೆಯಿರಿ ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ ಮಾತನಾಡಿ, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆದ್ದರಿಂದ ಎರಡನ್ನು ಸಮ ಮನಸ್ಥಿತಿಯಿಂದ ಸ್ವೀಕರಿಸಿಕೊಂಡು ಹೋಗುವಂತೆ ಸ್ಪರ್ಧಾಳುಗಳಿಗೆ ಶುಭ ಕೋರಿದರು.
ಪುರುಷರ ಸ್ವಾತಂತ್ರ ಓಟ ಸ್ಪರ್ಧೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್.ಎಚ್. ಮುರಳಿಧರ ಪ್ರಥಮ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಸಂದೀಪ್ ದ್ವಿತೀಯ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಮೊನಿಶ್ ಮೇದಪ್ಪ ತೃತೀಯ ಸ್ಥಾನ ಪಡೆದಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಎಚ್.ಎ. ಅಪ್ಸರಾ ಪ್ರಥಮ, ಎಚ್.ಜಿ. ಧುನುಶ್ರೀ ದ್ವಿತೀಯ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಿ.ಎನ್. ಚೈತ್ರ ತೃತೀಯ ಸ್ಥಾನ ಪಡೆದಿದ್ದಾರೆ.
ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರೊ.ಎಂ.ಎನ್. ಪ್ರಕಾಶ್, ಇತಿಹಾಸ ವಿಭಾಗದ ಉಪನ್ಯಾಸಕ ಪ್ರೊ.ಟಿ.ಎಲ್. ತ್ಯಾಗರಾಜು, ದೈಹಿಕ ಶಿಕ್ಷಣ ನಿರ್ದೇಶಕ ಎವರೆಸ್ಟ್ ರೋಡ್ರಿಗಸ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪವನ್‌ಕೃಷ್ಣ, ರಮೇಶ್, ಪ್ರವಾಸೋದ್ಯಮ ವಿಭಾಗದ ಪ್ರೊ.ಹರ್ಷಿತ್ ಮತ್ತಿತರರು ಹಾಜರಿದ್ದರು.