

ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿ
ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ೯ ಆಕಾಂಕ್ಷಿಗಳು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಅರ್ಜಿ ಸಲ್ಲಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಆರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮೂವರು ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಸಲ್ಲಿಸಲು ನ.೧೫ ಕೊನೆ ದಿನವಾಗಿತ್ತು. ಇದೀಗ ನ.೨೧ ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಯೊಂದಿಗೆ ೨ ಲಕ್ಷ ರೂಪಾಯಿ ಕಟ್ಟಡ ಶುಲ್ಕ ಪಾವತಿಸಬೇಕಾಗಿತ್ತು. ಅರ್ಜಿ ಶುಲ್ಕ ಹೆಚ್ಚಾಗಿರುವುದರಿಂದ ಕೊಡಗಿನಿಂದ ಇತರೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವ ಸಾಧ್ಯತೆ ವಿರಳ ಎನ್ನಲಾಗಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಘಟಾನುಘಟಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ೧೩ ಚುನಾವಣೆ ಎದುರಿಸುವ ಮೂಲಕ ಕೊಡಗಿನ ರಾಜಕೀಯದಲ್ಲಿ ದಾಖಲೆ ನಿರ್ಮಿಸಿರುವ ಮಾಜಿ ಸಚಿವ ಬಿ.ಎ. ಜೀವಿಜಯ ಮತ್ತೊಮ್ಮೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರು ವುದು ವಿಶೇಷ. ಮುಖ್ಯಮಂತ್ರಿ ಆಗಿದ್ದ ಆರ್. ಗುಂಡೂರಾವ್ ಸೋಲಿಸುವುದರ ಮೂಲಕ ಗಮನ ಸೆಳೆದಿರುವ ಜೀವಿಜಯ, ಹೊಸದಾಗಿ ಅಸ್ತಿತ್ವಕ್ಕೆ ಬಂದ ಮಡಿಕೇರಿ ಕ್ಷೇತ್ರದಲ್ಲಿ (ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಮುನ್ನಡೆ) ಸತತವಾಗಿ ಸೋಲು ಅನುಭವಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮತ್ತೊಮ್ಮೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಶ್ರೀರಕ್ಷೆಯಲ್ಲಿ ಕಳೆದ ಬಾರಿ ಅಂತಿಮ ಕ್ಷಣದಲ್ಲಿ ಅಚ್ಚರಿಕರ ರೀತಿ ಟಿಕೆಟ್ ಪಡೆದಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಂದ್ರಕಲಾ ಟಿಕೆಟ್‌ಗಾಗಿ ಅಂತಿಮ ಕ್ಷಣದವರೆಗೂ ಪೈಪೋಟಿ ನಡೆಸುವುದು ನಿಶ್ಚಿತ.
ಈ ಹಿಂದೆ ಕೊಡಗು ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಅನಿರೀಕ್ಷಿತವಾಗಿ ಸೋಲು ಅನುಭವಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚಂದ್ರಮೌಳಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ವರಿಷ್ಠ ಮುಖಂಡರೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಹೈಕೋಟರ್ ಹಿರಿಯ ವಕೀಲರೂ ಆಗಿರುವ ಚಂದ್ರಮೌಳಿ ಟಿಕೆಟ್‌ಗಾಗಿ ಉನ್ನತ ಮಟ್ಟದಲ್ಲಿ ಪ್ರಯತ್ನ ಮುಂದುವರಿಸಿದ್ದಾರೆ.
ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮತ ಪಡೆಯುವುದರ ಮೂಲಕ ಬಿಜೆಪಿಗೆ ಆಘಾತವುಂಟು ಮಾಡುವುದರ ಮೂಲಕ ಕೊಡಗಿನ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದ್ದ ಡಾ.ಮಂಥರ್ ಗೌಡ ಎಂಎಲ್‌ಎ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಎಂಎಲ್ಸಿ ಚುನಾವಣೆಯಲ್ಲಿ ಸೋಲು ಅನುಭವಿಸಿದ ದಿನದಿಂದಲೂ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್‌ಕುಮಾರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಅರ್ಜಿ ಸಲ್ಲಿಸಿದ್ದಾರೆ. ಮುಕ್ಕಾಟೀರ ಶಿವು ಮಾದಪ್ಪ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿ, ಮಂಜುನಾಥ್‌ಕುಮಾರ್ ಅವರನ್ನು ನೇಮಕ ಮಾಡ ಲಾಗಿತ್ತು. ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯ ನ್ವಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕೆಪಿಸಿಸಿ ಪದಾಧಿಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದ ಅವರಿಗೆ ಇದುವರೆಗೂ ಯಾವ ಹುದ್ದೆ ಯೂ ನೀಡಿಲ್ಲ.
೨೦೨೩ ರ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿರುವ ಕರ್ನಾಟಕ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ೨ ದಶಕದಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಆರ್ಥಿಕ ನೆರವು ನೀಡುವುದರ ಮೂಲಕ ಮಹಾದಾನಿಯಾಗಿ ಗುರುತಿಸಲ್ಪಟ್ಟಿದ್ದಾರೆ.
ವಿರಾಜಪೇಟೆಗೆ ಮೂವರು
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮೂವರು ಪ್ರಬಲ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಕಳೆದೊಂದು ವರ್ಷದಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಸ್ಪರ್ಧೆ ಖಚಿತ ಎಂಬ ಭಾವನೆ ಮೂಡಿತ್ತು.
ಇದೀಗ ಟಿಕೆಟ್ ಆಕಾಂಕ್ಷಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡಗಿನ ಉಸ್ತುವಾರಿ ಸಚಿವರಾಗಿದ್ದ ಎಂ.ಆರ್. ಸೀತಾರಾಮ್ ಆಪ್ತ ಸಹಾಯಕ ಕದ್ದಣಿಯಂಡ ಹರೀಶ್ ಬೋಪಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ವೀಣಾ ಅಚ್ಚಯ್ಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ವೀಣಾ ಅಚ್ಚಯ್ಯ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ದ್ದರು. ಖರ್ಗೆ ಬೆಂಬಲದಿಂದ ವಿಧಾನ ಪರಿಷತ್ ಸದಸ್ಯರಾಗಿ ಅಚ್ಚರಿಕರವಾಗಿ ಆಯ್ಕೆಯಾಗಿದ್ದರು. ಎಂಎಲ್ಸಿ ಅವಧಿ ಪೂರ್ಣಗೊಂಡಿರು ವುದರಿಂದ ಎಂಎಲ್‌ಎ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೊಮ್ಮೆ ವಿರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೋಲು ಅನುಭವಿಸಿದ್ದರು.
**
ಮಡಿಕೇರಿ ಕ್ಷೇತ್ರಕ್ಕೆ ೬ ಹಾಗೂ ವಿರಾಜಪೇಟೆ ಕ್ಷೇತ್ರಕ್ಕೆ ೩ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ನ.೨೧ ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಕ್ಷೇತ್ರ ಹಾಗೂ ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸೂಕ್ತ ಅಭ್ಯರ್ಥಿಯನ್ನು ವರಿಷ್ಠರು ಆಯ್ಕೆ ಮಾಡಲಿದ್ದಾರೆ. ವರಿಷ್ಠರು ನಿರ್ಧರಿಸುವ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ತೀತೀರ ಧರ್ಮಜ ಉತ್ತಪ್ಪ, ಜಿಲ್ಲಾಧ್ಯಕ್ಷ, ಕೊಡಗು ಜಿಲ್ಲಾ ಕಾಂಗ್ರೆಸ್.