ಯೋಜನೆ ಅನುಷ್ಠಾನ ಯಶಸ್ಸಿಗೆ ಸಹಕರಿಸಿ

20HSN5
Published on

ಹಾಸನ: ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದರ ಮೂಲಕ ಯಶಸ್ಸಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಸೋಮವಾರ, ಜ.24ರಂದು ಆಯೋಜಿಸಿರುವ ತ್ರೈಮಾಸಿಕ ಕೆಡಿಪಿ ಸಭೆಗೆ ಪೂರಕವಾಗಿ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಪ್ರಧಾನ ಮಂತ್ರಿ ಕೃಷಿಕ್ ಸಮ್ಮಾನ್ ಹಾಗೂ ರಾಜ್ಯ ಸರ್ಕಾರದ ನೆರವು ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸಬೇಕು. ಬೆಳೆ ಪದ್ಧತಿ, ರಸಗೊಬ್ಬರ, ವಿಮೆ ಸೇರಿ ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಾಮಾಜಿಕ ಭದ್ರತಾ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪಬೇಕು. ಅರ್ಜಿ ವಿಲೇವಾರಿ ವಿಳಂಬವಾಗಬಾರದು. ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪಿಂಚಣಿ ಹಾಗೂ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಹೋಬಳಿಗಳಲ್ಲಿ ಕಂದಾಯ ಅದಾಲತ್ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆ ಸುಧಾರಣೆಯಾಗಲಿ:
ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಸೌಲಭ್ಯ ಇನ್ನಷ್ಟು ಸುಧಾರಿಸಬೇಕು. ಗ್ರಾಮೀಣ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗೆ ಭರ್ತಿ ಪ್ರಕ್ರಿಯೆ ನಡೆಸಬೇಕು. ಗರ್ಭಿಣಿ ಅಥವಾ ಬಾಣಂತಿಯರನ್ನು ಖಾಸಗಿ ಆಸ್ಪತ್ರೆಗಳಿಗೆ ಕಳಿಸದೆ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ ಚಿಕಿತ್ಸೆ ನೀಡಬೇಕು. ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ಫಲಪ್ರದವಾಗಬೇಕು ಎಂದರು.
ಫಲಿತಾಂಶ ಕಾಯ್ದುಕೊಳ್ಳಿ:
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಕಳೆದ ಬಾರಿ ಪ್ರಥಮ ಸ್ಥಾನ ಗಳಿಸಿದ್ದು, ಅದೇ ಸಾಧನೆ ಮುಂದುವರಿಯಬೇಕು. ಶಾಲಾ ಕಾಲೇಜು ಕಟ್ಟಡ, ಸೌಕರ್ಯ ಕೊರತೆಯಿದ್ದರೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಪರೀಕ್ಷೆ ತಯಾರಿ ಈಗಿನಿಂದಲೇ ಆಗಬೇಕು ಎಂದರು.
ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ನಿವಾಸ್ ಸೆಪಟ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net