

ಹನೂರು: ಬೆನಕನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಸೋಮವಾರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.
ಶ್ರಾವಣಮಾಸ ಮುಕ್ತಾಯದ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತದಲ್ಲಿ ಬೇಡಗಂಪಣ ಅರ್ಚಕರಿಂದ ಮಹಾ ಕುಂಭಾಭಿಷೇಕ ವಿಜೃಂಭಣೆಯಿಂದ ನೆರವೇರಿತು.
ದೇಗುಲಕ್ಕೆವಿವಿಧ ಪುಷ್ಪ ಹಾಗೂ ತಳಿರು ತೋರಣ, ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಭಾನುವಾರ ಸಂಜೆ 6.30ರಿಂದ ರಾತ್ರಿ 8.30ರವರೆಗೆ ಸ್ವಾಮಿಗೆ ಬೇಡಗಂಪಣ ಅರ್ಚಕರಿಂದ ಎಣ್ಣೆಮಜ್ಜನ ಸೇವೆ ನಡೆಯಿತು. ಭಕ್ತರಿಗೆ ದೇವರ ದರ್ಶನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇಗುಲದ ಗಾಳಿ ಬಸವೇಶ್ವರ ಸ್ವಾಮಿ ಅಂಕಣದ ಬಳಿ ಮಜ್ಜನ ಸೇವೆಯ ನೇರ ವೀಕ್ಷಣೆಗೆ ಎಲ್‌ಇಡಿ ಪರದೆ ಅಳವಡಿಸಿತ್ತು.
ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಮುಂಜಾನೆ 3.30ರಿಂದ ಸಂಜೆ 6.30 ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ ಚಾಮರ ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ದೇಗುಲಕ್ಕೆ ಬಂದರು. ಸ್ವಾಮಿಗೆ ಸಂಕಲ್ಪಾಧಿ, ಗಣಪತಿ ಪೂಜೆ, ಪಂಚಕಳಸ ಸಮೇತ ನವರತ್ನ ಕಿರೀಟಧಾರಣೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಶತನಾಮ ಬಿಲ್ವಾರ್ಚನೆ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿ ಹಾಗೂ ಹಾಲಿನ ಅಭಿಷೇಕ ನೆರವೇರಿಸಿದರು.
ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕೀರಿಟಧಾರಣೆ, ಧೂಪ ದೀಪಧಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು.
ಶ್ರಾವಣ ಮಾಸ ಮುಕ್ತಾಯದ ಹಿನ್ನೆಲೆಯಲ್ಲಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಮಾದಪ್ಪನಿಗೆ ಮಹಾ ಕುಂಭಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಅರ್ಚಕರು ಮಡಿ ವಸ್ತ್ರ ಧರಿಸಿ ಬೆಳಗ್ಗೆ 9.30ರಲ್ಲಿ ಶಿವ-ಪಾರ್ವತಿಯ ಉತ್ಸವ ಮೂರ್ತಿಯೊಂದಿಗೆ ಸಾವಿರಾರು ಭಕ್ತರೊಡನೆ ಸತ್ತಿಗೆ, ಸೂರಪಾನಿ, ಛತ್ರಿ, ಚಾಮರ, ನಂದಿಕಂಬ ಹಾಗೂ ಮಂಗಳವಾದ್ಯದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ 108 ಕಳಸಗಳಿಗೆ ನೀರು ತುಂಬಿಸಿ ವಿಶೇಷ ಪೂಜೆ ಸಲ್ಲಿಸಿದರು.
ಕುಂಭಕಳಶ ಹೊತ್ತ ಅರ್ಚಕರು ಮೆರವಣಿಗೆಯ ಮೂಲಕ ದೇಗುಲಕ್ಕೆ ತೆರಳಿ ಪ್ರದಕ್ಷಿಣೆ ಹಾಕಿದರು. ಈ ವೇಳೆ ಚಪ್ಪರದ ಮಾಳಿಗೆಯಲ್ಲಿ ಕುಂಭ ಕಳಸವನ್ನಿಟ್ಟು ಶ್ರೀಗಳ ಸಾನ್ನಿಧ್ಯದಲ್ಲಿ ಹೋಮ ನಡೆಸಿ ಪೂಜೆ ಸಲ್ಲಿಸಲಾಯಿತು. 10.30ರಲ್ಲಿ ಗರ್ಭಗುಡಿಗೆ ತೆರಳಿ ನವಗ್ರಹ ಪೂಜೆ, ಅಷ್ಟದಿಕ್ಪಾಲಕರ ಪೂಜೆ, ಗಣಪತಿ ಹೋಮ ಹಾಗೂ ಪೂರ್ಣಾಹುತಿ ನೆರವೇರಿಸಿ ಸ್ವಾಮಿಗೆ ಕುಂಭಾಭಿಷೇಕ ನೆರವೇರಿಸಲಾಯಿತು. ಇದೇ ವೇಳೆ 108 ಎಳನೀರಿನ ಅಭಿಷೇಕ, ಹಾಲು, ಗಂಧ ಹಾಗೂ ಪಂಚಾಮೃತ ಅಭಿಷೇಕ ನೆರವೇರಿತು. ಲಕ್ಷ ಬಿಲ್ವಾರ್ಚನೆ ಮಾಡಿ ನೈವೇದ್ಯ ಅರ್ಪಿಸಿದ ಬಳಿಕ ಮಹಾಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ವೇಳೆ ತೀರ್ಥ, ಪ್ರಸಾದ ವಿತರಿಸಲಾಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಹುಲಿ, ಬಸವ ಹಾಗೂ ರುದ್ರಾಕ್ಷಿ ಉತ್ಸವ ವಾಹನಗಳೂ ಪಾಲ್ಗೊಂಡಿದ್ದವು. ವೀರಗಾಸೆ ಕುಣಿತ ಎಲ್ಲರ ಗಮನ ಸೆಳೆಯಿತಲ್ಲದೆ, ಮ.ಬೆಟ್ಟದ ಸಾಕಾನೆ ಉಮಾ ಮೆರವಣಿಗೆಯಲ್ಲಿ ಭಾಗವಹಿಸಿ ಭಕ್ತರ ಮನ ಗೆದ್ದಿತು.
ಉತ್ಸವದಲ್ಲಿ ಭಾಗಿಯಾದ ಭಕ್ತರು: ಅಮಾವಾಸ್ಯೆ ಅಂಗವಾಗಿ ಮಾದಪ್ಪನ ಸನ್ನಿಧಿಗೆ ಆಗಮಿಸಿದ ಭಕ್ತರು ದೇಗುಲದ ಮುಂಭಾಗ ಧೂಪ ಹಾಕಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು. ಕೆಲವರು 500 ರೂ.ಟಿಕೆಟ್ ಪಡೆದು ವಿಶೇಷ ಕೌಂಟರ್ ಮೂಲಕ ತೆರಳಿ ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲದ ಆವರಣದಲ್ಲಿ ಜರುಗಿದ ಬಸವ ವಾಹನ, ಹುಲಿ ವಾಹನ ಹಾಗೂ ರುದ್ರಾಕ್ಷಿ ವಾಹನ ಉತ್ಸವದ ಸೇವೆಗಳಲ್ಲಿ ಭಾಗಿಯಾಗಿದ್ದರು. ಈ ವೇಳೆ ಭಕ್ತರು ದಂಡಿನ ಕೋಲನ್ನು ಹೊತ್ತು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿದರು.
ಉತ್ಸವದ ವೇಳೆ ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಜಯಘೋಷಗಳನ್ನು ಮೊಳಗಿಸುವ ಮೂಲಕ ಮಾದಪ್ಪನ ಕೃಪೆಗೆ ಪಾತ್ರರಾದರು. ಕೆಲವರು ಮುಡಿಸೇವೆ, ಪಂಜಿನ ಸೇವೆ, ರಜಾಸೇವೆ ನೆರವೇರಿಸುವ ಮೂಲಕ ಹರಕೆ ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ಕಡೆಗಳಿಂದ ಭಕ್ತರು ಆಗಮಿಸಿದ್ದರು. ಇದರಲ್ಲಿ ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರ ಸಂಖ್ಯೆ ಹೆಚ್ಚಿತ್ತು. ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳ ಜತೆಗೆ ನಿರಂತರ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರಿಗೆ ಇಲಾಖೆ ವತಿಯಿಂದ ಭಕ್ತರ ಸಂಖ್ಯೆಗೆ ಅನುಗುಣವಾಗಿ ಬಸ್ ಸೌಕರ್ಯ ಒದಗಿಸಲಾಗಿತ್ತು. ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಬೇಡಗಂಪಣ ಅರ್ಚಕ ಕೆ.ವಿ ಮಾದೇಶ್, ದೇಗುಲದ ಪ್ರಧಾನ ಆಗಮಿಕ ಕರವೀರಸ್ವಾಮಿ, ಪಾರುಪತ್ತೇಗಾರ ಮಹದೇವಸ್ವಾಮಿ, ಪ್ರಾಧಿಕಾರದ ನೌಕರರು ಇದ್ದರು.