

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಮಹಾ ಶಿವರಾತ್ರಿಯ ಹಿನ್ನ್ನೆಲೆಯಲ್ಲಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ ಹಾಗೂ ವಿವಿಧ ಉತ್ಸವಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇಗುಲದಲ್ಲಿ ಗುರುವಾರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ರಾತ್ರಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಸತ್ತಿಗೆ, ಸೂರಿಪಾನಿ, ಛತ್ರಿ, ಚಾಮರ ಹಾಗೂ ಮಂಗಳ ವಾದ್ಯದೊಂದಿಗೆ ಭಕ್ತರ ಸಮ್ಮುಖದಲ್ಲಿ ಮೆರವಣಿಗೆಯ ಮೂಲಕ ಸಾಲೂರು ಮಠಕ್ಕೆ ಕೊಂಡೋಯ್ದು ಪೂಜೆ ನೆರವೇರಿಸಿ ಬಿಜಗೈಂಸಲಾಗಿತ್ತು.
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ಮಠದಲ್ಲಿ ಉತ್ಸವ ಮೂರ್ತಿಗೆ ಅಗ್ರ ಪೂಜೆ ನೆರವೇರಿಸಿ ಮಾದಪ್ಪನ ಸನ್ನಿಧಿಗೆ ಪೊಡಮಟ್ಟು ಕಳುಹಿಸಿಕೊಡಲಾಯಿತು. ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ಪೂಜೆ ಸಲ್ಲಿಸಲಾಯಿತು. ಈ ವೇಳೆ ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಘೋಷಣೆ ಕೂಗಿ ಮಾದಪ್ಪನ ಕೃಪೆಗೆ ಪಾತ್ರರಾದರು. ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ಸಂಜೆ 6.30 ರಿಂದ 8.30 ರವರೆಗೆ ಸ್ವಾಮಿಗೆ ಬೇಡಗಂಪಣ ಸರದಿ ಅರ್ಚಕರಿಂದ ಎಣ್ಣೆಮಜ್ಜನ ಸೇವೆ ನೆರವೇರಿಸಲಾಯಿತು. ದೀಪ, ಧೂಪಧಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಶಿವರಾತ್ರಿ ಅಂಗವಾಗಿ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ವಿವಿಧ ಹಣ್ಣು ಹಾಗೂ ಪುಷ್ಪಗಳಿಂದ ವಿಶೇಷವಾಗಿ ಸಿಂಗಾರ ಮಾಡಲಾಗಿತ್ತು. ಜತೆಗೆ ದೇಗುಲದ ಸುತ್ತಲೂ ಹೂವು, ತಳೀರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ವಿದ್ಯುತ್ ದೀಪದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ದೇಗುಲದ ಅಲಂಕಾರವನ್ನು ವೀಕ್ಷಿಸಿದ ಭಕ್ತರಿಂದ ಮೆಚ್ಚುಗೆ ವ್ಯಕ್ತವಾಯಿತು.
ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಈಗಾಗಲೇ ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಕಾಲ್ನಡಿಗೆ ಮೂಲಕ ಆಗಮಿಸಿ ಮ.ಬೆಟ್ಟದಲ್ಲಿ ಬೀಡು ಬಿಟ್ಟಿದ್ದಾರೆ. ಜತೆಗೆ ಶುಕ್ರವಾರ ರಾತ್ರಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಜರುಗುವ ಜಾಗರಣೆಯಲ್ಲಿ ಪಾಲ್ಗೊಳ್ಳಲು ಮಧ್ಯಾಹ್ನದ ನಂತರ ಮ.ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂತು. ರಾತ್ರಿ ದೇಗುಲದ ಆವರಣ ಹಾಗೂ ರಂಗಮಂದಿರದಲ್ಲಿ ಭಕ್ತರು ಶಿವನ ಧ್ಯಾನ ಮಾಡಿದರು. ಇದರಿಂದ ದೇಗುಲದ ಆವರಣ ಸೇರಿದಂತೆ ಮ.ಬೆಟ್ಟದ ಎಲ್ಲೆಡೆ ಭಕ್ತಗಣ ತುಂಬಿ ತುಳುಕುತ್ತಿದ್ದು ಜಾತ್ರೆಗೆ ಸಾಕ್ಷಿಯಾಯಿತು. ಇತ್ತ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಜೆ 7ಗಂಟೆಗೆ ಚಿನ್ನದ ತೇರಿನ ಉತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕರದಿಂದ ಕಂಗೊಳಿಸುತ್ತಿದ್ದ ತೇರನ್ನು ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಸಾಗಿದರು. ಈ ವೇಳೆ ಭಕ್ತರ ಜಯಘೋಷ ಮುಗಿಲು ಮುಟ್ಟುವಂತಿತ್ತು.
ಹರಕೆ ಹೊತ್ತ ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಕೆಲ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ ಕೈಗೊಳ್ಳುವುದರ ಮೂಲಕ ಹರಕೆ ತೀರಿಸಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.