

ಬಸವಕಲ್ಯಾಣ: ಶ್ರೀಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಭಾರತಿ ಸಂಸ್ಕೃತಿಯನ್ನು ಕಟ್ಟಿಕೊಟ್ಟಿದ್ದಾರೆ. ಇದರಲ್ಲಿನ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಕೊಳ್ಳಲು ಎಲ್ಲರೂ ಪ್ರಯತ್ನಿಸಬೇಕು ಎಂದು ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ ಹೇಳಿದರು.
ತಾಲೂಕು ಆಡಳಿತ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಗುರುವಾರ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಮಕ್ಕಳಿಗೆ ಮನೆಯಲ್ಲಿ ಹಾಗೂ ಶಾಲೆಗಳಲ್ಲಿ ಉತ್ತಮ ಸಂಸ್ಕಾರ ನೀಡಬೇಕು ಎಂದು ಹೇಳಿದರು.
ಕಲಬುರಗಿಯ ಸಾಹಿತಿ ಸಂತೋಷ ಹೂಗಾರ ವಿಶೇಷ ಉಪನ್ಯಾಸ ನೀಡಿದರು.
ನಗರ ಸಭೆ ಪೌರಾಯುಕ್ತ ರಾಜು.ಡಿ ಬಣಕಾರ, ಬಿಸಿಎಂ ಅಧಿಕಾರಿ ವಿ.ಬಿ ಹಿರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರ, ಸಿಡಿಪಿಒ ಗೌತಮ ಸಿಂಧೆ ಇತರರಿದ್ದರು. ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ ಸ್ವಾಗತಿಸಿದರು. ದೈಹಿಕ ಶಿಕ್ಷಕ ಶಿವಕುಮಾರ ಜಡಗೆ ನಿರೂಪಣೆ ಮಾಡಿದರು. ಶಿವಕುಮಾರ ಬಿರಾದಾರ ವಂದಿಸಿದರು.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮೆರವಣಿಗೆ: ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ತೆರೆದ ವಾಹನದಲ್ಲಿ ವಾಲ್ಮೀಕಿ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಯಿತು. ಕೋಟೆಯಿಂದ ಮುಖ್ಯ ರಸ್ತೆಯ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಆಗಮಿಸಿ ನಂತರ ವೇದಿಕೆಯ ಕಾರ್ಯಕ್ರಮದವರೆಗೆ ಸಾಗಿತು. ದತ್ತು ಪದ್ಮೆ, ಶಂಕರಾವ ಜಮಾದಾರ, ಗೋವಿಂದ ಚಾಮಲ್ಲೆ, ಮಲ್ಲಿಕಾರ್ಜುನ ಬೊಕ್ಕೆ, ಈಶ್ವರ ಬೊಕ್ಕೆ, ಚಂದ್ರಕಾಂತ ಮೇತ್ರೆ, ನಾಗನಾಥ ಚಾಮಲ್ಲೆ ಭಾಗವಹಿಸಿದ್ದರು.