ಮಹರ್ಷಿ ವಾಲ್ಮೀಕಿ ಜಯಂತಿ

17 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಹರ್ಷಿ ವಾಲ್ಮೀಕಿ ಅವರ ಜೀವನವೇ ಒಂದು ಪಾಠ. ಅವರು ರಾಮಾಯಣ ಮಹಾಕಾವ್ಯವನ್ನು ರಚಿಸುವ ಮೂಲಕ ಪ್ರತಿಯೊಬ್ಬರೂ ಜೀವನದಲ್ಲಿ ಎದುರಿಸುವ ಪ್ರಸಂಗಗಳನ್ನು ಪಾತ್ರಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ನಿತ್ಯ ಸತ್ಯವಾಗಿರುವ ಜೀವನ ಮೌಲ್ಯಗಳ ಸಂದೇಶಗಳನ್ನು ಮಹಾಕಾವ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒಬ್ಬ ಬೇಟೆಗಾರ ವೃತ್ತಿಯ ವ್ಯಕ್ತಿ ಸತ್ಯದ ಅರಿವಾದಾಗ ಮಹಾಕಾವ್ಯವನ್ನು ಬರೆದು, ಮನುಕುಲಕ್ಕೆ ಮಾರ್ಗದರ್ಶಕ ಮಹರ್ಷಿ ಎಂದು ಪ್ರಸಿದ್ಧಿ ಗಳಿಸಿದವರು ವಾಲ್ಮೀಕಿ. ಸರ್ಕಾರ ಪರಿಶಿಷ್ಟರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರಯೋಜನ ಪಡೆದು ಎಲ್ಲರೂ ಶಿಕ್ಷಿತರಾಗಿ ಸಾಧನೆ ಮಾಡಬೇಕು ಎಂದರು.
ಮಹರ್ಷಿ ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಮನೋಹರ ಗುಡಸಲಮನಿ, ಚಂದ್ರಶೇಖರ ಜುಟ್ಟಲ, ಸುರೇಶ ಗುಂಡನವರ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಸಂಪನ್ಮೂಲ ಶಿಕ್ಷಕ ಶಿವಾನಂದ ಇಟಗಿ ಮಹರ್ಷಿ ವಾಲ್ಮೀಕಿ ಜೀವನ, ಆರ್ದಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಹುಧಾ ನಗರಾಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ, ಡಿಡಿಪಿಐ ಎಸ್.ಎಸ್. ಕೆಳದಿಮಠ ವಾಲ್ಮೀಕಿ ಸಮಾಜದ ಮುಖಂಡರಿದ್ದರು.
ಕಾರ್ಯಕ್ರಮಕ್ಕೂ ಮೊದಲು ಮಹರ್ಷಿ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net