ಮಹಿಳೆಯರು ಆರ್ಥಿಕವಾಗಿ ಸಬಲರಾಗಿ: ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಸಲಹೆ

Mahila Dina)
Published on

ಮಂಡ್ಯ: ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹಿಳಾ ಸಬಲೀಕರಣವು ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರುತ್ತಿದೆ. ಅಂತೆಯೇ ಮಹಿಳೆಯರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2022-23ನೇ ಸಾಲಿನ ಅತ್ಯುತ್ತಮ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಶಿಕ್ಷಣಕ್ಕೆ ಮೊದಲು ಪ್ರಾಮುಖ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ದೇಶದಲ್ಲಿ ಹಲವಾರು ಮಹಿಳೆಯರು ಉನ್ನತ ಕ್ಷೇತ್ರದಲ್ಲಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಹೆಣ್ಣು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸುತ್ತಾರೆ. ಜಿಲ್ಲೆಯಲ್ಲಿ 764 ಮಹಿಳಾ ಸ್ವಸಹಾಯ ಸಂಘವಿದೆ. ಇದರಲ್ಲಿ 1,20,000 ಮಹಿಳೆಯರು ಸ್ವ ಉದ್ಯೋಗವನ್ನು ಮಾಡುತ್ತಿದ್ದಾರೆ. ಇದರ ಜತೆ ಹೊಸ ಯೋಜನೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಹಿಂದೆ ಮಹಿಳೆಯರು ಮನೆಯಲ್ಲಿ ಗೃಹಿಣಿಯಾಗಿ ಕಾರ್ಯನಿರ್ವಹಿಸಿ ಸಣ್ಣದಾಗಿ ಹಣ ಉಳಿತಾಯ ಮಾಡುತ್ತಿದ್ದರು. ಆದರೆ ಇಂದು ಸ್ವಸಹಾಯ ಗುಂಪುಗಳ ಸದಸ್ಯರಾಗಿ ಸ್ವ ಉದ್ಯೋಗದಲ್ಲಿ ತೊಡಗಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಇಂದು ದೇಶದ ರಾಷ್ಟ್ರಪತಿ, ಆರ್ಥಿಕ ಸಚಿವರು, ದೊಡ್ಡ ದೊಡ್ಡ ಕಂಪನಿಗಳ ಮುಖ್ಯಸ್ಥರು ಮಹಿಳೆಯರಾಗಿದ್ದಾರೆ. ಅವರನ್ನು ಮಾದರಿಯಾಗಿ ತೆಗೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ಪಿ.ದೀಪಕ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎನ್.ಆರ್.ವೇಣುಗೋಪಾಲ್, ಬ್ಯಾಂಕ್ ಆ್ ಬರೋಡಾದ ಆರ್ಥಿಕ ಸಾಕ್ಷರತಾ ಸಂಯೋಜಕಿ ಕೆ.ಪಿ.ಅರುಣಾಕುಮಾರಿ ಇತರರಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿರುವ 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾದ 8 ಉತ್ತಮ ಸ್ವ-ಸಹಾಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net