

ಚಾಮರಾಜನಗರ: ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದರ ಮೂಲಕ ದೀರ್ಘಕಾಲಿಕ ಬಾಳಿಕೆ ಬರುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದಲ್ಲಿ ಶನಿವಾರ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಹನೂರು ಭಾಗದ ಕೆಲವು ಗ್ರಾಮಗಳಲ್ಲಿ ಮನೆ, ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಹಲವು ಮೂಲ ಸೌಕರ್ಯಗಳ ಕೊರತೆ ಇದ್ದು, ಜನರು ಕಷ್ಟದ ನಡುವೆ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ಸೌಕರ್ಯ ಒದಗಿಸಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈ ದೆಸೆಯಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದ್ದು, ಹಂತಹಂತವಾಗಿ ಅಗತ್ಯ ಮೂಲ ಸೌಕರ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಇದೀಗ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಬಾಕಿ ಉಳಿದಿರುವ ಮಣ್ಣಿನ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಸಮೀಪದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು ಮಕ್ಕಳು ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಕಾರ್ಯಕರ್ತೆಯಿಂದ ಮಾಹಿತಿ ಪಡೆದರು. ಈ ವೇಳೆ ಗ್ರಾಮಸ್ಥರು ಈ ಅಂಗನವಾಡಿ ಕೇಂದ್ರದಲ್ಲಿ ವಿದ್ಯುತ್, ಕುಡಿಯುವ ನೀರು, ಕುರ್ಚಿಗಳ ಕೊರತೆ ಇದೆ. ಇದರಿಂದ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸೌಕರ್ಯ ಒದಗಿಸುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕರು ಅಗತ್ಯ ಭರವಸೆ ನೀಡಿದರು.
ಇಂಜಿನಿಯರ್ ಮಹಾದೇವ, ಮುಖಂಡರಾದ ಸುರೇಶ್, ವಿಜಯಕುಮಾರ್, ನಿಂಗರಾಜು, ರಾಜಣ್ಣ, ಸೋಮಣ್ಣ, ಲಕ್ಷ್ಮಣ, ಮುನಿಯಪ್ಪ, ಮಹೇಶ್ ಹಾಗೂ ಇನ್ನಿತರರು ಇದ್ದರು.