

ನಾಪೋಕ್ಲು: ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ನಿಗದಿತ ಅವಧಿಯೊಳಗೆ ಕೆಲಸ ಮುಗಿಸಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾಲನಿ, ಕಾನ್ಶಿರಾಮ್ ನಗರ ಕಾಲನಿ ಹಾಗೂ ಹೊದವಾಡ ಕೊಟ್ಟಮುಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದ ಬಳಿಕ ಹೊದವಾಡ ಮತ್ತು ಕೊಟ್ಟಮೂಡಿ ಗ್ರಾಮದಲ್ಲಿ ನೂತನ ರಸ್ತೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರ ಸಹಕಾರದಿಂದಾಗಿ ಸುಮಾರು 3.60 ಕೋಟಿ ರೂ. ವಿಶೇಷ ಅನುದಾನ ಬಂದಿದ್ದು, ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದೆ ಅಂದರು.
ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿಗೆ ಶಾಸಕರು ಸ್ಪಂದಿಸಿದ ಹಿನ್ನೆಲೆಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎ.ಹಂಸಾ ಶಾಸಕರನ್ನು ಅಭಿನಂದಿಸಿದರು. ಹೊದ್ದೂರು ಗ್ರಾಮ ಪಂಚಾಯಿತಿಯ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಮೊಣ್ಣಪ್ಪ, ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ಎಂ ಬಿ .ಹಮೀದ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮಾವತಿ, ಸದಸ್ಯರಾದ ಕಡ್ಲೆರ ಟೈನಿ, ಎಚ್.ಎಂ.ಸರಸು, ಕೆ.ಎಂ. ಮೈದು , ಚೌರಿರ ಅನಿತಾ, ಲಕ್ಷ್ಮೀ, ಪಿಡಿಒ ಅಬ್ದುಲ್ಲ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕೋಚನ ಹರಿಪ್ರಸಾದ್, ಕೊಟ್ಟಮುಡಿ ಅಬೂಬಕರ್ ಹಾಜಿ, ವಲಯ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಇತರರಿದ್ದರು.