

ಹನೂರು: ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಮೂಲಕ ನಿಗಧಿತ ಅವದಿಯೊಳಗೆ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.
ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಸರತಿ ಸಾಲಿನ ಸಂರ್ಕೀಣ ಕಾಮಗಾರಿ, ಹೈಟೆಕ್ ಶೌಚಗೃಹ ಹಾಗೂ ಸ್ನಾನಗೃಹ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ಮ.ಬೆಟ್ಟ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ. ಇಲ್ಲಿಗೆ ತಮಿಳುನಾಡು ಹಾಗೂ ಕರ್ನಾಟಕದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇತ್ತೀಚೆಗೆ ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಭಕ್ತರಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಭಕ್ತರು ದೇವರ ದರ್ಶನ ಪಡೆಯಲು ಕೋಟ್ಯಂತರ ರೂ. ವೆಚ್ಚದಲ್ಲಿ ಸರತಿ ಸಾಲಿನ ಸಂರ್ಕೀರ್ಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಆದರೆ ಈ ಕಾರ್ಯ ವಿಳಂಬವಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಈ ಬಗ್ಗೆ ಮುತುರ್ವಜಿ ವಹಿಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವುದರ ಮೂಲಕ ಭಕ್ತರ ಸೇವೆಗೆ ಸಮರ್ಪಣೆಯಾಗಬೇಕು. ಇನ್ನು ಪ್ರಗತಿಯಲ್ಲಿರುವ ಹೈಟೆಕ್ ಶೌಚಗೃಹ ಹಾಗೂ ಸ್ನಾನಗೃಹ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಅಧಿಕಾರಿಗಳು ಪದೆಪದೇ ಭೇಟಿ ನೀಡಿ ಪರಿಶೀಲಿಸುವುದರ ಮೂಲಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ತಿಳಿಸಿದರು.
ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ನಿರ್ಮಿತಿ ಕೇಂದ್ರ ಎಇಇ ಚಿಕ್ಕಲಿಂಗಯ್ಯ, ಪಿಡಬ್ಲ್ಯುಡಿ ಎಇಇ ಚಿನ್ನಣ್ಣ, ಪ್ರಾಧಿಕಾರದ ಇಂಜಿನಿಯರ್ ಸೆಲ್ವ ಗಣಪತಿ ಹಾಗೂ ಇನ್ನಿತರರು ಇದ್ದರು.