ಹಾಸನಾಂಬ ದರ್ಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ

ಹಾಸನಾಂಬ ದರ್ಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ
Published on

ಹಾಸನ: ಈ ಬಾರಿ ಅ.9ರಿಂದ 23ರ ವರೆಗೆ ಜರುಗುವ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರ ದಟ್ಟಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ತೊಂದರೆಯಾಗದಂತೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ಅಗತ್ಯ ಸಿದ್ಧತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಾಗೂ ಹಾಸನಾಂಬ ದೇವಿ ದರ್ಶನ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ರಚಿಸಿರುವ ವಿವಿಧ ಸಮಿತಿಗಳು ಸಮನ್ವಯತೆಯಿಂದ ತಮ್ಮ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.

ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಜನಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಲು ನಿತ್ಯ ಬಸ್, ರೈಲುಗಳ ಮೂಲಕ ಹಾಗೂ ಟೋಲ್‌ಗಳನ್ನು ಹೊರತುಪಡಿಸಿ ಇತರ ಮಾರ್ಗಗಳಲ್ಲಿ ನಗರಕ್ಕೆ ಪ್ರವೇಶಿಸುವ ವಾಹನಗಳ ಮಾಹಿತಿಯನ್ನು ಅಧಿಕಾರಿಗಳು ನೀಡುವಂತೆ ತಿಳಿಸಿದರು.

ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಜತೆಗೆ ಪಾದರಕ್ಷೆಗಳನ್ನು ಬಿಡಲು ಸ್ಟಾೃಂಡ್, ಟಿಕೆಟ್ ಕೌಂಟರ್, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಜನರ ಸುರಕ್ಷತೆಯ ದೃಷ್ಟಿಯಿಂದ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಬ್ಯಾರಿಕೇಡ್‌ಗಳು ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಬೇಕು ಎಂದರು.

ದೇವರ ದರ್ಶನಕ್ಕೆ ಆಗಮಿಸುವ ಭಕ್ತರು ಸ್ಥಳೀಯವಾಗಿ ಪ್ರವಾಸ ಮಾಡಲು ಟೂರ್ ಪ್ಯಾಕೇಜ್ ರೂಪಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ತಮ್ಮಯ್ಯ, ಉಪವಿಭಾಗಾಧಿಕಾರಿ ಮಾರುತಿ, ರಾಜೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net