ಡಿ.೨೯ ರಂದು ವಿಶ್ವಮಾನವ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಬಿ.ಎನ್.ವೀಣಾ

27adarshkdga1
Published on

ಮಡಿಕೇರಿ: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಡಿ೨೯ ರಂದು ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದರು.


ನಗರದ ಜಿಲ್ಲಾಧಿಕಾರಿರವರ ಕಚೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಆಯೋಜಿಸುವ ಸಂಬಂಧ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಅಂದು ನಗರದ ಮಂಗೇರಿರ ಮುತ್ತಣ್ಣ ವೃತ್ತದ ಬಳಿ ಇರುವ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಭಾ ಕಾರ್ಯಕ್ರಮ ಗಾಂಧಿ ಭವನದಲ್ಲಿ ನಡೆಯಲಿದ್ದು, ನಿಯಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಕುವೆಂಪು ಅವರು ವಿಶ್ವಮಾನವರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ವಿಶ್ವಮಾನವ ದಿನಾಚರಣೆ ಬೆಳಕು ಚೆಲ್ಲುವಂತಾಗಬೇಕು ಎಂದು ಸಲಹೆ ಮಾಡಿದರು.


ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಕುವೆಂಪು ಅವರ ಚಿಂತನೆ ಬಗ್ಗೆ ಮಾಹಿತಿ ನೀಡುವುದರ ಜತೆಗೆ ಕುವೆಂಪು ಗೀತೆಗಳನ್ನು ಹಾಡುವಂತಾಗಬೇಕು ಎಂದು ಸಲಹೆ ಮಾಡಿದರು.


ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿ, ಕುವೆಂಪು ಜನ್ಮ ದಿನದಂದು ಕುವೆಂಪು ಅವರ ಪುತ್ಥಳಿಗೆ ದೀಪಾಲಂಕಾರ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು.

ಪ್ರಮುಖರಾದ ರವಿಗೌಡ, ಪ್ರಕಾಶ್ ಆಚಾರ್ಯ, ರಾಜಶೇಖರ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net