

ರಾಮನಗರ: ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರ ಅಭಿವೃದ್ಧಿಗೆ ಸರ್ಕಾರವು ಅಭಿವೃದ್ಧಿ ನಿಗಮದ ಮೂಲಕ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ ಧ ಯೋಜನೆಗಳನ್ನು ಜಾರಿಗೊಳಿಸಿದೆ, ಈ ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅವರು ವಾಸಿಸುವ ಬಡಾವಣೆಗಳಿಗೆ ತೆರಳಿ ಅರಿವು ಮೂಡಿಸುವಂತೆ ನಿಗಮದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ . ಗುರುಕರ್ ನಿರ್ದೇಶನ ನೀಡಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಂದುಳಿದ ವರ್ಗಗಳ ಅಲೆಮಾರಿ/ ಅರೆ ಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅಲೆಮಾರಿ/ ಅಲೆ ಅಲೆಮಾರಿ ಸಮುದಾಯದವರು ವಾಸಿಸುವ ಪ್ರದೇಶಗಳಿಗೆ ಭೇಟಿ ನೀಡಬೇಕು, ಅಲ್ಲಿ ಸರ್ಕಾರ ಈ ಸಮುದಾಯದ ಜನರಿಗೆ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ದಿ ನಿಗಮದ ಮೂಲಕ ಹಮ್ಮಿಕೊಂಡಿರುವ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳು, ಅವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಬೇಕು. ಆ ಮೂಲಕ ಆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು.
ಪ್ರತಿ ತಿಂಗಳು ಸಮುದಾಯದವರು ವಾಸಿಸುವ ಎರಡು ಬಡಾವಣೆಗಳಿಗೆ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಘುನಾಥ್ ಕಡ್ಡಾಯವಾಗಿ ಭೇಟಿ ನೀಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಇದನ್ನು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಮೇಲ್ವಿಚಾರಣೆ ಮಾಡಬೇಕೆಂದು ಹೇಳಿದರು.
ಮಾಗಡಿ ತಾಲೂಕಿನ ಕುದೂರು ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಸ್ಮಶಾನ ಜಾಗ ಒತ್ತುವರಿಯಾಗಿದೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅಲೆಮಾರಿ ಬುಡಕಟ್ಟು ಸಮುದಾಯಗಳ ಮಹಾ ವೇದಿಕೆ ಅಧ್ಯಕ್ಷ ಆರ್. ರಂಗಪ್ಪ ಸಭೆಯಲ್ಲಿ ಪ್ರಸ್ತಾಪಿಸಿದಾಗ, ಕೂಡಲೇ ಜಿಲ್ಲಾಧಿಕಾರಿಯವರು ಮೊಬೈಲ್ ಮೂಲಕ ಮಾಗಡಿ ತಹಶೀಲ್ದಾರರಿಗೆ ಕರೆ ಮಾಡಿ ಜಾಗವನ್ನು ತೆರವುಗೊಳಿಸಲು ಅಗತ್ಯ ಕ್ರಮವಸುವಂತೆ ನಿರ್ದೇಶನ ನೀಡಿದರು.
ರಾಮನಗರದಲ್ಲಿ ಡಿ ದೇವರಾಜ್ ಅರಸು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಸಭೆಯಲ್ಲಿ ಕೋರಿದ ಆರ್. ರಂಗಪ್ಪ ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಮಕ್ಕಳು 6ನೇ ತರಗತಿಯ ನೇರ ಪ್ರವೇಶಕ್ಕೆ ಅವಕಾಶ ಮಾಡಿಕೊಡುವಂತೆ ಸಭೆಯ ಗಮನಕ್ಕೆ ತಂದಾಗ, ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಯವರು, ಈ ಬಗ್ಗೆ ಸರ್ಕಾರದ ಆದೇಶದ ಅನುಸಾರ 6ನೇ ತರಗತಿಯ ನೇರ ಪ್ರವೇಶಕ್ಕೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.
ಜಿಲ್ಲೆಯ ಕೆಲವು ಗೊಲ್ಲರಹಟ್ಟಿಗಳಲ್ಲಿ ಬಸ್ ಸಂಚಾರ ಇರುವುದಿಲ್ಲ ಎಂದು ಸಮಿತಿಯ ಸದಸ್ಯರು ಸಭೆ ಗಮನಕ್ಕೆ ತಂದಾಗ , ಬಸ್ ಸೌಲಭ್ಯ ಒದಗಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ರಾಮನಗರ ಜಿಲ್ಲಾ ಅಲೆಮಾರಿ/ ಅರೆ ಅಲೆಮಾರಿ ಪ್ರಗತಿ ಪರಿಶೀಲನ ಸಲಹಾ ಸಮಿತಿ ಸದಸ್ಯರಾದ ಬಿ ರಂಗನಾಥಪ್ಪ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಲಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸತೀಶ್, ರಾಮನಗರ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿ ಮುನೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಕುಮಾರ್ ಮುಂತಾದವರು ಇದ್ದರು.