ಸುರಕ್ಷತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ

22 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೋವಿಡ್ ಹೊಸ ರೂಪಾಂತರಿ ತಳಿ ಬಗ್ಗೆ ಹೆಚ್ಚಿನ ಭಯ ಬೇಡ. ಜನಸಾಮಾನ್ಯರಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಅಗತ್ಯ ಕಾರ್ಯಕ್ರಮ ಆಯೋಜಿಸಬೇಕು. ಪರೀಕ್ಷೆ, ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿ ಸಿದ್ಧತೆ, ಔಷಧಿಗಳ ದಾಸ್ತಾನು ಇರುವಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಪೊಲೀಸ್ ಮತ್ತು ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆದಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಕುರಿತು ಸಭೆ ಜರುಗಿಸಿ ಮಾತನಾಡಿದರು.
ಕೋವಿಡ್ ಹೊಸ ರೂಪಾಂತರಿ ತಳಿ ಬಗ್ಗೆ ಜನರಲ್ಲಿ ಹೆಚ್ಚಿನ ಆತಂಕ, ಭಯ ಬೇಡ. ಈಗಾಗಲೇ ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿ ಮತ್ತು ಸಲಹಾತ್ಮಕ ಕ್ರಮಗಳನ್ನು ಪಾಲಿಸಿ ಜಾಗೃತಿ ವಹಿಸಬೇಕು. ಜಿಲ್ಲೆಯಲ್ಲಿ ಕಳೆದ ಕೋವಿಡ್ ಅವಧಿಯಲ್ಲಿ ಅನುಸರಿಸಿದ ಸೂಕ್ತ ಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಕೈಗೊಳ್ಳಲಾಗುವುದು. ಹಿಂದಿನ ಕೋವೀಡ್ ಸಂದರ್ಭದಲ್ಲಿ ರಚಿಸಿದ ಸಮಿತಿಗಳನ್ನು ಪುನರ್ ಸಿದ್ಧಿಗೊಳಸಿ, ಅಗತ್ಯವಿದ್ದಲ್ಲಿ ಸಮಿತಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಆರೋಗ್ಯ ಇಲಾಖೆಯಿಂದ ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ ಪಾಲಿಸಬೇಕು. ಆರೋಗ್ಯ ಇಲಾಖೆಯೊಂದಿಗೆ ಇತರ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಮತ್ತು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ವಿವರಿಸಿದರು.
ಜಿಪಂ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಸಿ ಅರುಣಕುಮಾರ, ವಿವಿಧ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯಕ್ರಮದ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net