ಗ್ರಾಪಂಗಳ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿ

11 gkp 04
Published on

ಗೋಣಿಕೊಪ್ಪ: ಗ್ರಾಮ ಪಂಚಾಯಿತಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವ ಮೂಲಕ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಸೂಚಿಸಿದರು.

ಪೊನ್ನಂಪೇಟೆಯ ಸಾಮರ್ಥ್ಯಸೌಧದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಆ ಮೂಲಕ ಪ್ರಗತಿ ಸಾಧಿಸಬೇಕು ಎಂದರು.

ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಗತಿ ಸಾಧಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಶೌಚಗೃಹ ನಿರ್ಮಾಣವಾಗುತ್ತಿದ್ದು, ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಈಗಾಗಲೇ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ನೀಡಲಾಗಿದ್ದು, 3 ವರ್ಷದೊಳಗಿನ ನರೇಗಾ ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಯಲ್ಲಿ ಆರೈಕೆ ಮಾಡಬಹುದಾಗಿದೆ. ಈ ಸಂಬಂಧ ಪ್ರಚಾರ ಕೈಗೊಂಡು ನೋಂದಣಿ ಮಾಡಿಸಬೇಕು ಎಂದು ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಪಿಎಂ ವಿಶ್ವಕರ್ಮ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ಮಾಡುವುದು ಅವಶ್ಯಕ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಬೇಕು. ವಸತಿ ಯೋಜನೆಯಡಿ ಇನ್ನೂ ಪ್ರಾರಂಭವಾಗದೆ ಉಳಿದಿರುವ ಮನೆಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಬೇಸಿಗೆ ಎದುರಾಗುತ್ತಿದ್ದು ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಎಲ್ಲ ಮನೆಗಳಿಗೂ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ತಾಪಂ ಇಒ ಅಪ್ಪಣ್ಣ, ವಿಷಯ ನಿರ್ವಾಹಕರಾದ ಗಯಾ, ಶಿವನಂಜಯ್ಯ, ತಾಂತ್ರಿಕ ಸಂಯೋಜಕ ನಿರಂಜನ್ ತಾಲೂಕು ವಸತಿ ನೋಡಲ್‌ಅಧಿಕಾರಿ ಅಸ್ಲಂ ಪಾಷ, ತಾಲೂಕು ಐಇಸಿ ಸಂಯೋಜಕರಾದ ನರೇಂದ್ರ, ಅರುಣ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net