

ಮೈಸೂರು: ಯೋಗ ಅಭ್ಯಾಸವನ್ನು ಒಂದು ದಿನ ಮಾತ್ರ ಮಾಡಿದರೆ ಸಾಲದು. ಇದೊಂದು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಶನಿವಾರ ಆಯೋಜಿಸದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂ.20 ರವರೆಗೆ ಯೋಗೋತ್ಸವ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಯೋಗದ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಉದ್ದೇಶದಿಂದ ವಿವಿಧ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ ಎಲ್ಲ ತಾಲೂಕುಗಳಲ್ಲಿ ಯೋಗ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ್ದು, ಇವರು ಜೂ.21ರಂದು ನಡೆಯುವ ಯೋಗ ದಿನಾಚರಣೆ ಪಾಲ್ಗೊಂಡು ಯೋಗ ಮಾಡಲಿದ್ದಾರೆ. ಯೋಗದ ಅರಿವನ್ನು ಮೂಡಿಸುವ ಹಿನ್ನೆಲೆಯಲ್ಲಿ ಯೋಗೋತ್ಸವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ವಿಶ್ವನಾಥ್ ಮಾತನಾಡಿ, ಯೋಗ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಯೋಗಾಭ್ಯಾಸವು ಬಹಳ ಯಶಸ್ವಿಯಾಗಿ ನಡೆದಿದೆ. ಜೂ.21 ಮಹತ್ವ ದಿನ. ಭಾರತದಿಂದ ಆರಂಭವಾದ ಯೋಗವನ್ನು ಪ್ರಪಂಚಾದ್ಯಂತ ಯೋಗ ದಿನ ಆಚರಣೆ ಮಾಡುತ್ತಿದ್ದಾರೆ. ಯೋಗದಿಂದ ಬಹಳ ಉಪಯೋಗ ಇದೆ. ಹೀಗಾಗಿ ಎಲ್ಲರೂ ನಿತ್ಯ ಯೋಗಾಭ್ಯಾಸ ಮಾಡಬೇಕು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಕೆ.ಬಸವರಾಜು, ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಜಮೀಲ್, ನಿವೃತ್ತ ಕೆಎಎಸ್ ಅಧಿಕಾರಿ ರವಿಕುಮಾರ್, ಡಾ.ಯತೀಶ್ ಸತ್ಯನಾರಾಯಣ್ ಸೇರಿದಂತೆ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಯೋಗ ತರಬೇತುದಾರರು ಇದ್ದರು.