

ಬೆಳಗಾವಿ : ಮಲಪ್ರಭಾ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವುದೇ ನಮ್ಮ ಗುರಿಯಾಗಿದ್ದು, ಕಾರ್ಖಾನೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಎಂದರೆ ಜಿದ್ದಾಜಿದ್ದಿ ಇದ್ದೇ ಇರುತ್ತದೆ. ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗಬಾರದು. ಗೆದ್ದಾಗ ಹಿಗ್ಗಬಾರದು. ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದ ತಂಡ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದು, ಕಾರ್ಖಾನೆಯ ಅಭಿವೃದ್ದಿಗೆ ನಮ್ಮ ತಂಡ ಹಗಲಿರುಳು ಶ್ರಮಿಸಲಿದೆ ಎಂದರು.
ಮಲಪ್ರಭಾ ಸಕ್ಕರೆ ಕಾರ್ಖಾನೆ ಏಶಿಯಾದಲ್ಲೇ ನಂಬರ್ ಒನ್ ಕಾರ್ಖಾನೆಯಾಗಿತ್ತು. ಈಗ ಮತ್ತೆ ಹೊಸ ಆಡಳಿತ ಮಂಡಳಿ ಕಾರ್ಖಾನೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಿದೆ. ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆಗೆ 220 ಕೋಟಿ ರೂ. ಸಾಲವಿದ್ದು, ಈ ಸಾಲ ತೀರಿಸುವುದರ ಜತೆಗೆ ರೈತರ ಆಶೋತ್ತರಗಳನ್ನು ಈಡೇರಿಸಬೇಕಿದೆ. ಜತೆಗೆ ನೌಕರರ ಹಿತ ರಕ್ಷಣೆ ಸಹ ನಮ್ಮ ಗುರಿ. ಶೀಘ್ರದಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಚನ್ನರಾಜ ಹಟ್ಟಿಹೊಳಿ ಕಳೆದ 15 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿದ್ದು, ಮುಂದೆಯೂ ಇದೇ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದರು.
ರೈತರ ಒಳಿತಿಗೆ ಆದ್ಯತೆ:
ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಅಭೂತಪೂರ್ವ ಗೆಲುವನ್ನು ರೈತರು, ಷೇರುದಾರರು ನಮಗೆ ನೀಡಿದ್ದಾರೆ. ಕಾರ್ಖಾನೆಯನ್ನು ಸರಿಯಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮದಾಗಿದೆ. ಸಣ್ಣ ಹಾಗೂ ದೊಡ್ಡ ಪ್ರಮಾಣದ ರೈತರು ಕಾರ್ಖಾನೆಯಲ್ಲಿದ್ದಾರೆ. ರೈತರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲು ಕ್ರಮವಹಿಸಲಿದ್ದೇವೆ. ಕಳೆದ 6-7 ವರ್ಷಗಳಿಂದ ಕಾರ್ಖಾನೆ ಆಡಳಿತ ನೋಡುತ್ತಿದ್ದೇನೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಖಾನೆಗೆ ರೈತರು ಕಬ್ಬು ನೀಡಿದ 10 ರಿಂದ 15 ದಿನದೊಳಗೆ ಬಿಲ್ ಪಾವತಿಸಲಾಗುವುದು ಎಂದರು.
ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಇದ್ದರು.