ಹೃನ್ಮನ ತಣಿಸುವ ಮಲ್ಲಳ್ಳಿ ಜಲಪಾತ

ಹೃನ್ಮನ ತಣಿಸುವ ಮಲ್ಲಳ್ಳಿ ಜಲಪಾತ
Published on

ಹಿರಿಕರ ರವಿ ಸೋಮವಾರಪೇಟೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ.

ವಾರ್ಷಿಕವಾಗಿ ಅತಿ ಹೆಚ್ಚು ಮಳೆ ಬೀಳುವ ಶಾಂತಳ್ಳಿ ಹೋಬಳಿಯಲ್ಲಿ ಸೋಮವಾರವೂ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಪುಷ್ಪಗಿರಿ ತಪ್ಪಲಿನಲ್ಲಿ ಹುಟ್ಟಿ ಹರಿಯುವ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನೈಸರ್ಗಿಕ ಮಲ್ಲಳ್ಳಿ ಜಲಪಾತ ಭೋರ್ಗರೆಯುತ್ತ ಧುಮ್ಮಿಕ್ಕುತ್ತಿದೆ.

ಹಚ್ಚಹಸಿರಿನ ಗಿರಿಕಂದರ, ಪ್ರಕೃತಿಯ ಸೊಬಗಿನ ಎರಡು ಬೆಟ್ಟಗಳ ತಳದಲ್ಲಿ ಧುಮ್ಮಿಕುವ ಜಲಧಾರೆ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ. ದಿನನಿತ್ಯ ನೂರಾರು ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆದು ಹೃನ್ಮನ ತಣಿಸುವ ನೈಸರ್ಗಿಕ ಜಲಧಾರೆಯ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಿಗರ ದಂಡು ಲಗ್ಗೆಯಿಡುತ್ತಿದೆ.

200 ಅಡಿ ಎತ್ತರದಿಂದ ಧುಮ್ಮಿಕ್ಕುವ ಜಲಧಾರೆ: ನಿಸರ್ಗ ರಮಣೀಯತೆಯನ್ನು ತನ್ನೊಡಲ್ಲಿರಿಸಿಕೊಂಡಿರುವ ಪುಷ್ಪಗಿರಿ ಬೆಟ್ಟತಪ್ಪಲಿನಲ್ಲಿ ಹುಟ್ಟುವ ಕುಮಾರಧಾರಾ ನದಿ ಮಲ್ಲಳ್ಳಿ ಗ್ರಾಮದ ಕಲ್ಲು ಬಂಡೆಯಿಂದ 390 ಅಡಿ ಎತ್ತರದಿಂದ ಧುಮುಕಿ ಜಲಧಾರೆಯಾಗಿ ಪ್ರವಹಿಸುತ್ತದೆ. ಮೊದಲ ಹಂತದ 200 ಅಡಿ ಎತ್ತರದಿಂದ ಕೆಳಕ್ಕೆ ಧುಮುಕಿ ನಂತರ 90 ಅಡಿ ಎತ್ತರದಿಂದ ಕೆಳಕ್ಕೆ ಬೀಳುತ್ತದೆ. ಹೀಗೆ ಹಂತ ಹಂತವಾಗಿ ಒಟ್ಟಾಗಿ ಸುಮಾರು 390 ಅಡಿ ಎತ್ತರದಿಂದ ನೀರು ಬೀಳುವ ಸದ್ದು ಪ್ರವಾಸಿಗರನ್ನು ಆಕರ್ಷಿಸುತ್ತದೆ. ಮುಂದೆ ಹರಿದು ಕುಕ್ಕೆ ಸುಬ್ರಮಣ್ಯ ದೇವಾಲಯದ ಸ್ನಾನಘಟ್ಟ ತಲುಪುತ್ತದೆ.

ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಎಂಬ ಗ್ರಾಮದಲ್ಲಿ ಮಲ್ಲಳ್ಳಿ ಜಲಪಾತವಿದೆ. ಸೋಮವಾರಪೇಟೆಯಿಂದ 25ಕಿ.ಮೀ ಕ್ರಮಿಸಿದರೆ, ಜಲಪಾತ ದರ್ಶನವಾಗುತ್ತದೆ. ಸೋಮವಾರಪೇಟೆಯಿಂದ, ಯಡೂರು, ಶಾಂತಳ್ಳಿ, ಕುಮಾರಳ್ಳಿ ಮೂಲಕ 20 ಕಿ.ಮೀ. ಕ್ರಮಿಸಿ, ಹಂಚಿನಳ್ಳಿ ಗ್ರಾಮವನ್ನು ತಲುಪಿ, ಎಡಕ್ಕೆ ತಿರುಗಿ ನಾಲ್ಕು ಕಿ.ಮೀ. ತೆರಳಿದರೆ ಮಲ್ಲಳ್ಳಿ ಜಲಪಾತದ ದರ್ಶನವಾಗುತ್ತದೆ. ಜಲಪಾತದವರೆಗೂ ವಾಹನಗಳಲ್ಲಿ ತೆರಳಬಹುದು.

ಮಲ್ಲಳ್ಳಿ ಜಲಪಾತವನ್ನು ಹತ್ತಿರದಿಂದ ನೋಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಚ್ಚರಿಕೆ ವಹಿಸುವುದು ಅಗತ್ಯ. ಜಲಪಾತದ ಕೆಳಕ್ಕಿಳಿಯಲು 400 ಕ್ಕೂ ಅಧಿಕ ಮೆಟ್ಟಿಲನ್ನು ನಿರ್ಮಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net