

ನಾಪೋಕ್ಲು: ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣಮಟ್ಟದ ಆಹಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ ಹೇಳಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ನಾಪೋಕ್ಲುವಿನ ಹಳೇ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಿದೆ. ಇತ್ತೀಚಿನ ದಿನಗಳ ಜೀವನ ಶೈಲಿಯಲ್ಲಿನ ಬದಲಾವಣೆ, ಗುಣಮಟ್ಟದ ಆಹಾರ ಪಡೆಯದಿರುವುದು ಇದಕ್ಕೆ ಕಾರಣ. ಆದ್ದರಿಂದ ಸರ್ಕಾರದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಿ ಎಂದು ಸಲಹೆ ನೀಡಿದರು.
ಅಪೌಷ್ಟಿಕತೆಯು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ರೋಗಕ್ಕೆ ಒಳಗಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ. ಸಮತೋಲಿತ ಆಹಾರವಾದ ಹಸಿರು ಎಲೆಯುಕ್ತ ತರಕಾರಿ ಮತ್ತು ಹಣ್ಣುಗಳು, ಬೇಳೆ ಕಾಳು, ಏಕದಳ ಮತ್ತು ದ್ವಿದಳ ಧಾನ್ಯಗಳು, ಶೇಂಗಾ ಹಾಗೂ ವಿಶೇಷವಾಗಿ ಸಿರಿಧಾನ್ಯ ಬಳಸುವಂತಾಗಬೇಕು ಎಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸುವಂತಾಗಬೇಕು. ಸರ್ಕಾರದ ಹಲವು ಯೋಜನೆಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು.
ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಪಾಲಕರು ಪೌಷ್ಟಿಕ ಆಹಾರಗಳ ಪ್ರದರ್ಶನದಲ್ಲಿ ಪಾಲ್ಗೊಂಡರು. ಅತ್ಯುತ್ತಮ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಮಕ್ಕಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ ಅರುಣ್ ಅಧ್ಯಕ್ಷತೆ ವಹಿಸಿದ್ದರು. ಪೊಮ್ಮಕ್ಕಡ ಕೂಟದ ಸದಸ್ಯೆ ಅಜ್ಜೇಚಿರ ರಾಣಿ ತಾಲೂಕು ,ಸ್ತ್ರೀಶಕ್ತಿ ಕೂಟದ ಕಾರ್ಯದರ್ಶಿ ಅನಿತಾ, ಮೇಲ್ವಿಚಾರಕಿ ಶೀಲಾ, ನಿವೃತ್ತ ಶಿಕ್ಷಕಿ ಅಕ್ಕಮ್ಮ, ಬೊಪ್ಪಂಡ ಯಶೋದಾ, ಆಶಾ ಕಾರ್ಯಕರ್ತೆ ರಮ್ಯಾ, ಆರೋಗ್ಯ ಕಾರ್ಯಕರ್ತೆ ಉಮಾ ಮಹೇಶ್ವರಿ, ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಸಹಾಯಕಿ ಮಮತಾ, ಮಕ್ಕಳು ಪಾಲ್ಗೊಂಡಿದ್ದರು.