

ಉಡುಪಿ: ಮಲ್ಪೆಯಲ್ಲಿ ಮಹಿಳೆ ಮೇಲಿನ ಹಲ್ಲೆ ಪ್ರಕರಣ ಉದ್ದೇಶಪೂರ್ವಕಲ್ಲ. ಕಳ್ಳ ಕೈಗೆ ಸಿಕ್ಕಾಗ ಸಾರ್ವಜನಿಕರ ಆಕ್ರೋಶಭರಿತ ಪ್ರತಿಕ್ರಿಯೆ ಸಾಮಾನ್ಯ. ಹೀಗಾಗಿ- ಮಲ್ಪೆ ಮೀನುಗಾರರ ಸಂಘದ ಮಧ್ಯಸ್ಥಿಕೆಯಲ್ಲಿ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದಿರುವುದು ತಪ್ಪು. ಆದರೆ ಅಮಾಯಕರ ಮೇಲೆ ಅಟ್ರಾಸಿಟಿ ಮೊಕದ್ದಮೆ ದಾಖಲಿಸಿ ಬಂಧಿಸಿರುವುದು ಖಂಡನೀಯ. ಬೆಳಗ್ಗಿನ ಜಾವ 3 ಗಂಟೆಗೆ ಎದ್ದು ಮೀನುಗಾರರು ಸಮುದ್ರದಲ್ಲಿ ಜೀವದ ಹಂಗು ತೊರೆದು ಮೀನುಗಾರಿಕೆ ನಡೆಸಿ ತಂದ ಮೀನು ಕಳ್ಳತನವಾದಾಗ ಈ ರೀತಿ ಆಕ್ರೋಶದ ಪ್ರತಿಕ್ರಿಯೆಗಳು ಸಹಜ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಅಮಾಯಕರ ಮೇಲೆ ಮೊಕದ್ದಮೆ ದಾಖಲಿಸಬಾರದು ಎಂದು ಒತ್ತಾಯಿಸಿದ್ದಾರೆ.
ಯಾವುದೇ ಊರಿನಲ್ಲಿಯೂ ಕಳ್ಳರು ಕೈಗೆ ಸಿಕ್ಕಾಗ ಯಾರೂ ಗೌರವದಿಂದ ಕಾಣುವುದಿಲ್ಲ. ಈ ಪ್ರಕರಣ ನಡೆದ ಬಳಿಕ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮೀನುಗಾರ ಮುಖಂಡರ ಸಮಕ್ಷಮದಲ್ಲಿ ರಾಜಿ ಮಾಡಲಾಗಿತ್ತು. ಇಲ್ಲಿ ಎರಡು ಪಾರ್ಟಿಯವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಠಾಣಾಧಿಕಾರಿಗಳು ಎರಡೂ ಕಡೆಯವರಿಂದ ತಪ್ಪೊಪ್ಪಿಗೆ ಹಿಂಬರಹ ಬರೆಸಿಕೊಂಡು ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳಿಸಿದ್ದರು. ಘಟನೆಯ ವಿಡಿಯೋ ಚಿತ್ರೀಕರಣವನ್ನು ವೈಭವೀಕರಿಸಿದ ನಂತರ ಪೊಲೀಸ್ ಇಲಾಖೆ ಅಮಾಯಕ ಮೀನುಗಾರರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ. ಪ್ರಕರಣದಲ್ಲಿ ಭಾಗಿಯಾಗದವರನ್ನು ಬಂಧಿಸಿರುವುದರಿಂದ ಮೀನುಗಾರರು ಅಭದ್ರತೆಗೆ ಒಳಗಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಮತ್ಸ್ಯಕ್ಷಾಮದಿಂದ ಮೀನುಗಾರಿಕೆ ಕುಂಠಿತಗೊಂಡು ಮೀನುಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ಹಾಗೂ ಮೀನುಗಾರಿಕಾ ಸಲಕರಣೆಗಳಾದ ಬೋಟಿನ ಪ್ಯಾನ್, ಬ್ಯಾಟರಿ, ಜಿಪಿಎಸ್, ವೈಯರ್ಲೆಸ್, ಫಿಶ್ ಪೈಂಡರ್, ಬಲೆ ಸಾಮಗ್ರಿಗಳು ಕಳ್ಳತನವಾಗುತ್ತಿದ್ದರಿಂದ ಇಲ್ಲಿನ ಜನ ಆಕ್ರೋಶ ಭರಿತರಾಗಿದ್ದರು. ಮಲ್ಪೆ ಬಂದರಿನಲ್ಲಿ ನಡೆಯುತ್ತಿರುವ ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು. ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ರಾಜ್ಯ ಸರ್ಕಾರ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಆಗ್ರಹಿಸಿದ್ದಾರೆ.