

ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಜಿಲ್ಲಾ ಘಟಕ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ನಗರದ ಹಳೇ ಡೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಡೆಯಲು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್‌ಅನ್ನು ತಳ್ಳಿ ನುಗ್ಗಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ. 187 ಕೋಟಿ ರೂ.ಗಳನ್ನು ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಈ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಂಡಿರುವ ಅನುಮಾನವಿದೆ. ಇದಕ್ಕೆ ಪೂರಕವಾಗಿ ತೆಲಂಗಾಣ ಕಾಂಗ್ರೆಸ್ ಮುಖಂಡನ ಮನೆಯಲ್ಲಿ 30 ಕೋಟಿ ರೂ. ಹಣ ದೊರೆತ್ತಿದೆ. ಹಾಗಾಗಿ ಹಗರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಪುಕ್ಕಟ್ಟೆ ಗ್ಯಾರಂಟಿಗಳ ಅನುಷ್ಠಾನಕ್ಕೆ ನಿಗಮ ಮಂಡಳಿಗಳ ಮತ್ತು ಪರಿಶಿಷ್ಟ ವರ್ಗದವರ ಹಣ ಬಳಸಿಕೊಳ್ಳುತ್ತಿರುವುದು ಖಂಡನೀಯ. ಮುಖ್ಯಮಂತ್ರಿಯೇ ಹಣಕಾಸಿನ ಸಚಿವರಾಗಿದ್ದು, ಅವರಿಗೆ ಗೊತ್ತಿಲ್ಲದೆ ಹಗರಣ ನಡೆಯಲು ಸಾಧ್ಯವಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೋಟೆ ಕೃಷ್ಣನಾಯಕ, ಮೈಲ್ಯಾಕ್ ಮಾಜಿ ಅಧ್ಯಕ್ಷ ಫಣೀಶ್, ವಕ್ತಾರ ಮಹೇಶ್, ನಗರ ಎಸ್‌ಟಿ ಮೋರ್ಚಾ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ ಹಾಗೂ ಇತರರು ಪಾಲ್ಗೊಂಡಿದ್ದರು.