

ಮೈಸೂರು: ಕಾಂಗ್ರೆಸ್ ನಾಯಕರು ಭಾರತದ ಪರವೋ ಅಥವಾ ಪಾಕಿಸ್ತಾನದ ಪರವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶೇಖ್ ಶಹಜಹಾನ್ ಆಗ್ರಹಿಸಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ವಿಧಾನಸಭೆಯಲ್ಲಿ ರಾಜ್ಯಸಭಾ ಚುನಾವಣೆ ಸಂದರ್ಭ ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆ ಕೂಗುತ್ತಿದ್ದರು. ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಕಾರ್ಯಕರ್ತರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ. ಹಾಗಾದರೆ ಇವರು ಯಾರ ಪರ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿಯೇ ಇಲ್ಲ ಎಂದು ಆರಂಭದಲ್ಲಿ ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡರು. ಇದೀಗ ಎಫ್‌ಎಸ್‌ಎಲ್ ವರದಿ ಬಂದಿದ್ದು, ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವುದು ದೃಢಪ ಟ್ಟಿದೆ. ಈ ವರದಿ ಆಧಾರದ ಮೇಲೆ ಆರೋಪಗಳನ್ನು ಬಂಧಿಸಲಾಗಿದೆ. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಾದ್ ‘ಪಾಕಿಸ್ತಾನ ನಮಗೆ ಶತ್ರು ರಾಷ್ಟ್ರವಲ್ಲ, ಅದು ನೆರೆ ರಾಷ್ಟ್ರವಷ್ಟೇ’ ಎಂದು ಹೇಳಿಕೆ ನೀಡಿರುವುದು ಖಂಡನೀಯ ಎಂದರು.
‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತ ಮೊಹಮ್ಮದ್ ಶಫಿ ನಾಶಿಪುಡಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಇರುವ ಫೋಟೋ ಇದೀಗ ಬಯಲಿಗೆ ಬಂದಿದೆ. ಈ ರೀತಿಯ ಘೊಷಣೆಗಳು ಇಲ್ಲಿಗೆ ನಿಲ್ಲುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ಪಾಕಿಸ್ತಾನದ ಪರವಾಗಿ ಇಷ್ಟೊಂದು ಪ್ರೀತಿ ಏಕೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.