

ಶಿವಮೊಗ್ಗ: ಮಹಿಳೆಗೆ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗೆ ಶಿವಮೊಗ್ಗ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಭದ್ರಾವತಿ ಪೀಠಾಸೀನವು 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 35 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಭದ್ರಾವತಿ ತಾಲೂಕು ಕೋಮಾರನಹಳ್ಳಿ ತಾಂಡಾದ ನಿವಾಸಿ ತಾವರನಾಯ್ಕ್ (62) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2021ರ ಮಾ.27ರಂದು ತಾವರನಾಯ್ಕ್ ನೆರೆಮನೆಯ ಜಯಾಬಾಯಿ ಎಂಬಾಕೆಯೊಂದಿಗೆ ಜಗಳ ಮಾಡಿಕೊಂಡಿದ್ದ. ಈ ವೇಳೆ ಮಚ್ಚಿನಿಂದ ಮಹಿಳೆ ಕುತ್ತಿಗೆ ಹಾಗೂ ತಲೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದ.
ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಎಸ್‌ಐ ಮಂಜೇಶ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಾವರನಾಯ್ಕನಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 3 ತಿಂಗಳ ಸಾದಾ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಸರ್ಕಾರಿ ಅಭಿಯೋಜಕಿ ಪಿ.ರತ್ನಮ್ಮ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.