

ಮದ್ದೂರು: ತಾಲೂಕು ಮಟ್ಟದ ಅಧಿಕಾರಿಗಳು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಎಂ.ಉದಯ್ ತಾಕೀತು ಮಾಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಗ್ರಾಮಾಂತರ ಪ್ರದೇಶದ ಜನತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕೈಗೊಳ್ಳಬೇಕೆಂದು ಸೂಚಿಸಿದರು.
ಅಧಿಕಾರಿಗಳು ಗ್ರಾಮಾಂತರ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸವನ್ನು ಆದ್ಯತೆ ಮೇರೆಗೆ ಶೀಘ್ರವಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸೆಸ್ಕ್ ಅಧಿಕಾರಿಗಳು ಕುಡಿಯುವ ನೀರು ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಜತೆಗೆ ದುಸ್ಥಿತಿಯಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ತ್ವರಿತ ಗತಿಯಲ್ಲಿ ದುರಸ್ತಿಪಡಿಸಬೇಕು ಅಥವಾ ಬದಲಾಯಿಸುವ ಕೆಲಸವನ್ನು ಜರೂರಾಗಿ ಮಾಡಬೇಕು ಎಂದು ತಿಳಿಸಿದರು.
ಸಾಮಾನ್ಯವಾಗಿ ಆತಗೂರು ಹೋಬಳಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಅಗತ್ಯವಿರುವೆಡೆ ಬೋರ್‌ವೆಲ್ ಕೊರೆಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಏತ ನೀರಾವರಿ ಮೂಲಕ ಕೆರೆ-ಕಟ್ಟೆಗಳಿಗೆ ಹಾಗೂ ಅಮೃತ ಸರೋವರ ಯೋಜನೆಯಡಿ ನಿರ್ಮಿಸಿರುವ ಕೆರೆಗಳಿಗೆ ನೀರು ತುಂಬಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು.
ನೀರಾವರಿ ಅಧಿಕಾರಿಗಳು ಕಚೇರಿಯಲ್ಲಿ ಕೂತು ಕಾಟಾಚಾರದ ಕೆಲಸ ಮಾಡುತ್ತಿದ್ದಾರೆ. ರೈತರ ಜಮೀನುಗಳ ಬಳಿ ತೆರಳಿ ತಾಲೂಕಿನ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸುವ ಕೆಲಸವನ್ನು ಮಾಡುತ್ತಿಲ್ಲ. ಈ ಬಗ್ಗೆ ರೈತರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ಈ ಕೂಡಲೇ ಸಮರ್ಪಕವಾಗಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ತಾ.ಪಂ ಇಒ ಎಲ್.ಸಂದೀಪ್ ಮಾತನಾಡಿ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶು ಇಲಾಖೆಗಳ ಅಧಿಕಾರಿಗಳು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಮಾತನಾಡಿದರು. ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.