ಪಿಎಂ ಯೋಜನೆಗಳನ್ನು ಸಮರ್ಪಕವಾಗಿ ನಿರ್ವಹಿಸಿ

Manage PM projects adequately
ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿದರು. ರಫಿ ಭಂಡಾರಿ, ಅಲ್ಲಾಭಕ್ಷ ಬಿಜಾಪುರ, ನಿಂಗಪ್ಪ ಗೋಠೆ ಮತ್ತಿತರರಿದ್ದಾರೆ.
Published on

ವಿಜಯಪುರ: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ ಸಮರ್ಪಕವಾಗಿ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತ ಮಂಗಳವಾರ ಹಮ್ಮಿಕೊಂಡ ಪರಿಶೀಲನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸುವ ಜತೆಗೆ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ತ್ವರಿತವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಾಮ ನಿರ್ದೇಶಿತ ಸಮಿತಿ ಸದಸ್ಯ ರಫಿ ಭಂಡಾರಿ ಮಾತನಾಡಿ, ಕಳೆದ ವರ್ಷ ದೌಲತ್‌ಕೋಟೆಯಲ್ಲಿರುವ ಹಾನಿಗೊಳಗಾದ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ಕರೆದು ನಿರ್ದೇಶನ ನೀಡಬೇಕು ಎಂದರು.

ಸದಸ್ಯ ಅಲ್ಲಾಭಕ್ಷ ಬಿಜಾಪುರ ಮಾತನಾಡಿ, ಅಂಗನವಾಡಿ ಮಕ್ಕಳಿಗೆ ದ್ವಿದಳ ಧಾನ್ಯ ಪೌಷ್ಟಿಕಾಂಶವಿರುವ ಆಹಾರ ನೀಡಬೇಕು. ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಂಡು ಶಿಕ್ಷಕರ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸಭೆಗೆ ಕೋರಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಭೆಯಲ್ಲಿ ನೀಡಿದ ಸಲಹೆ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವಾಣ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಶಾಂತ ಪೂಜಾರಿ, ಶಿಕ್ಷಣ ಇಲಾಖೆಯ ಮೈನುದ್ದೀನ ಬನಹಟ್ಟಿ, ರೇಷ್ಮೆ ಇಲಾಖೆಯ ಎಸ್. ಸಿದ್ದರಾಜು, ಪೊಲೀಸ್ ಇಲಾಖೆಯ ರಾಜೇಂದ್ರ ಕೂಸುರ, ನಾಮ ನಿರ್ದೇಶಿತ ಸದಸ್ಯ ಜಂಬುಕುಮಾರ ಬಾಗೇವಾಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net