

ಮೈಸೂರು: ವ್ಯವಸ್ಥಿತ ಘನ ತ್ಯಾಜ್ಯ ನಿರ್ವಹಣೆಯಿಂದ ಸುತ್ತಮುತ್ತಲಿನ ಪರಿಸರದ ನೈರ್ಮಲ್ಯ ಕಾಪಾಡಿಕೊಳ್ಳುವ ಜತೆಗೆ ಆರೋಗ್ಯಪೂರ್ಣ ವಾತಾವರಣ ನಿರ್ಮಿಸಬಹುದು. ಈ ಸಂಬಂಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.
ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವ್ಯವಸ್ಥಿತ ನಿರ್ವಹಣೆ ಸಂಬಂಧ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ನಗರದ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ಹಸಿ ಕಸ, ಒಣ ಕಸ ಹಾಗೂ ನಿರುಪಯುಕ್ತ ಕಸ ಎಂದು ಮೂರು ಭಾಗಗಳಾಗಿ ಪ್ರತ್ಯೇಕವಾಗಿ ವಿಂಗಡಿಸಿ, ವಿಲೇವಾರಿ ಮಾಡಬೇಕು. ನಗರದ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯದ ರಾಶಿ ಕಾಣಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಹಸಿ ಕಸ, ಒಣ ಕಸ ಹಾಗೂ ನಿರುಪಯುಕ್ತ ಕಸ ವಿಂಗಡಣೆ ಸಂಬಂಧ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಬೇಕು ಎಂದು ನಿರ್ದೇಶನ ನೀಡಿದರು.