ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಿಸಿ; ಡಿಸಿ ಟಿ.ಭೂಬಾಲನ್

DC MEETING
ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಮಹಾದೇವ ಮುರಗಿ, ಆಬಿದ್ ಗದ್ಯಾಳ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅವಶ್ಯವಿದ್ದೆಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣಾ ಕುರಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು. ಸಂಗೋಗಿ, ಹಂಜಗಿ, ಬಳಗಾನೂರ ಕೆರೆ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಕುಡಿಯುವ ನೀರಿಗಾಗಿ ಮಾತ್ರ ಬಳಸಬೇಕು. ಯಾವುದೇ ಸಮಸ್ಯೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗಬೇಕು. ಕುಡಿಯುವ ನೀರಿನ ವಿಷಯದಲ್ಲಿ ನಿಷ್ಕಾಳಜಿ ವಹಿಸದೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ, ಸಾರ್ವಜನಿಕರಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ನಿಗಾ ವಹಿಸಬೇಕು. ಮುಂಚಿತವಾಗಿಯೇ ಎಲ್ಲ ಮುಂಜಾಗ್ರತೆ ವಹಿಸಿಕೊಂಡು ನೀರು ಪೂರೈಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಲಿರುವ ಸ್ಥಳಗಳ ಕುರಿತು ಪಟ್ಟಿ ಮಾಡಿ ಸಿದ್ಧವಿಟ್ಟುಕೊಳ್ಳಬೇಕು. ಅವಶ್ಯಕತೆ ಇದ್ದಲ್ಲಿ ಟೆಂಡರ್ ಕರೆದು ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸಂಭವಿಸಬಹುದಾದ ನೆರೆಹಾವಳಿ ಪ್ರದೇಶಗಳ ಕುರಿತು ಮುಂಚಿತವಾಗಿ ಅಧಿಕಾರಿಗಳು ಸಮಗ್ರ ಮಾಹಿತಿಯನ್ನು ಅರಿತುಕೊಳ್ಳಬೇಕು. ಸಂಭವನೀಯ ಅವಘಡಗಳನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮ ವಹಿಸಬೇಕು. ಈಗಾಗಲೇ ಎಲ್ಲ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಜಿಲ್ಲೆಯ ಪ್ರವಾಹಕ್ಕೀಡಾಗಿ ಸಂಚಾರಕ್ಕೆ ವ್ಯತ್ಯವಾಗುವ ಸೇತುವೆಗಳ ಗುರುತಿಸಿಕೊಂಡು, ದುರಸ್ತಿ ಇದ್ದಲ್ಲಿ ಸರಿಪಡಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಭೀಮಾ ನದಿಯ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗಬಹುದಾದ ಗ್ರಾಮಗಳಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಸನ್ನದ್ದರಾಗಿರುವಂತೆ ಸೂಚಿಸಿದರು.
ನಿಯಮಾನುಸಾರ ಪರಿಹಾರ ವಿತರಣೆಯಲ್ಲಿ ತುರ್ತು ಕಾರ್ಯ ಕೈಗೊಳ್ಳಬೇಕು. ಅಪಾಯದ ಹಳ್ಳಗಳನ್ನು ಗುರುತಿಸಿ ಅವಘಢಗಳ ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಪಾಯದ ಸ್ಥಳಗಳಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು.

ಸಿಂದಗಿಯಲ್ಲಿ 2 ಬೊರವೆಲ್‌ಗಳ ಬಾಡಿಗೆ ಪಡೆಯಲಾಗಿದೆ. ಆಲಮೇಲದಲ್ಲಿ 19 ವಾರ್ಡ್‌ಗಳಿವೆ. 2 ವಾರ್ಡ್‌ಗಳ ಪೈಕಿ ವಿವೇಕನಗರದ ಒಂದು ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಇರುವುದರಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿ ಜಿಲ್ಲಾಧಿಕಾರಿಗಳು ಕುಡಿಯುವ ನೀರಿನ ವಿಷಯದಲ್ಲಿ ಮುಂಜಾಗ್ರತೆ ವಹಿಸಿ ಹಂತದಲ್ಲಿಯೇ ಕಾರ್ಯಯೋಜನೆ ರೂಪಿಸಿ, ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಸೌದಾಗರ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪಾ, ಇಂಡಿ ಉಪವಿಭಾಗಾಧಿಕಾರಿ ಆಬಿದ್ ಗದ್ಯಾಳ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net