

ಹನೂರು : ತಾಲೂಕಿನ ಆಣೆಹೊಲ ಹಾಗೂ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಮ.ಬೆಟ್ಟದ ರಾಷ್ಟ್ರಪತಿ ಭವನದಲ್ಲಿ ಗ್ರಾಮಸ್ಥರು ಸಚಿವರನ್ನು ಭೇಟಿಯಾಗಿ ಮಾತನಾಡಿ, ಮ.ಬೆಟ್ಟ ವ್ಯಾಪ್ತಿಯಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿವೆ. ಕೃಷಿಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಆದರೆ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿವೆ. ಇದರಿಂದ ನಾವು ನಷ್ಟವನ್ನು ಅನುಭವಿಸುತ್ತಿದ್ದೇವೆ. ಆದರೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗುತ್ತಿಲ್ಲ. ಜತೆಗೆ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಈವರಗೂ ಪರಿಹಾರ ದೊರೆತ್ತಿಲ್ಲ. ಇದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯ ಕಾಮಗಾರಿಗಳು ಕೆರೆ ಹೂಳು ತೆಗೆಸುವುದಕ್ಕೆ ಮಾತ್ರ ಸೀಮಿತವಾಗಿದೆ. ಸಿಮೆಂಟ್ ಸಂಬಂಧಿತ ಕಾಮಗಾರಿಗಳು ನಡೆಯುತ್ತಿಲ್ಲ. ಆಣೆಹೊಲ ಗ್ರಾಮವು ಮ.ಬೆಟ್ಟದಿಂದ 3 ಕಿ.ಮೀ. ದೂರದಲ್ಲಿದೆ. ಇಲ್ಲಿನ ವಿದ್ಯಾರ್ಥಿಗಳು ಮ.ಬೆಟ್ಟಕ್ಕೆ ನಡೆದೇ ಸಾಗಬೇಕಿದೆ. ಆದ್ದರಿಂದ ಜನರಿಗೆ ಸಾರಿಗೆ ಸೌಕರ್ಯವನ್ನು ಕಲ್ಪಿಸುವುದರ ಜತೆಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.
ಈ ವೇಳೆ ಸಚಿವರು ನರೇಗಾ ಯೋಜನೆಗೆ ಸಂಬಂಧಿಸಿದಂತೆ ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಅವರಿಗೆ ಕ್ರಮವಹಿಸುವಂತೆ ಸೂಚಿಸಿದರು. ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಸೂಚಿಸಲಾಗುವುದು ಎಂದು ಭರವಸೆ ನೀಡಿದರು.
ಕೊಳ್ಳೇಗಾಲ ತಹಸೀಲ್ದಾರ್ ಮಂಜುಳಾ, ರೈತ ಮುಖಂಡರಾದ ರಾಜು, ಶೇಖರ್, ನಾಗಣ್ಣ, ಜಗದೀಶ, ಚಂದ್ರಶೇಖರ್, ಪುಟ್ಟಸ್ವಾಮಿ, ಹುಚ್ಚಯ್ಯ, ಮಾದೇವ ಇತರರು ಇದ್ದರು.